×
Ad

ರಾಯಚೂರು ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ : ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Update: 2025-06-09 18:34 IST

ನಿತೀಶ್ ಕೆ. 

ರಾಯಚೂರು : ಹವಾಮಾನ ಇಲಾಖೆಯ ವರದಿಯನ್ವಯ ಮೇ 24 ರಂದು ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನಲೆಯಲ್ಲಿ ಭಾರಿ ಮಳೆ ಹಾಗೂ ಪ್ರವಾಹ ಕುರಿತು ಮುಂಜಾಗೃತಾ ಕ್ರಮಕೈಗೊಳ್ಳುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಭಾರಿ ಮಳೆ ಹಾಗೂ ಪ್ರವಾಹ ಎದುರಾದಲ್ಲಿ ಸಮರ್ಥವಾಗಿ ಎದುರಿಸಲು ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಸಿದ್ಧರಿರಬೇಕು. ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಯು ಕೇಂದ್ರ ಸ್ಥಾನದಲ್ಲಿದ್ದು, ಪ್ರವಾಹ ಹಾಗೂ ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನದಿ, ಹಳ್ಳ, ಕೆರೆ ದಡದಲ್ಲಿ ಬಟ್ಟೆ ತೊಳಿಯುವುದು, ಈಜಾಡುವುದು, ದನ ಅಥವಾ ಕರುಗಳನ್ನು ಮೆಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮವಹಿಸಬೇಕು.

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ, ಶಾಲೆಗಳು ಹಾಗೂ ಇತರೆ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುವುದರಿಂದ ಸಾವು ನೋವುಗಳು ಸಂಭವಿಸುತ್ತದೆ. ಸಾರ್ವಜನಿಕರಿಗೆ ಸುರಕ್ಷತೆಯ ಮುನ್ನೆಚ್ಚರಿಕೆಯ ಕ್ರಮ ತೆಗೆದುಕೊಳ್ಳವುದು ಅಥವಾ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಾಗೃತಿ ಮೂಡಿಸುವುದು. ನದಿ ದಡದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅಪಾಯವಿರುವ ನದಿ ಅಥವಾ ಹಳ್ಳಗಳಲ್ಲಿ ಈಜಾಡುವುದು ಮತ್ತು ಪೋಟೋ, ಸೆಲ್ಪಿ ತೆಗೆಯದಂತೆ ಕ್ರಮವಹಿಸುವುದು. ಭಾರಿ ಮಳೆ ಹಾಗೂ ಪ್ರವಾಹದಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು, ಮೈಕ್ ಮೂಲಕ ಜಾಗೃತಿ ಮೂಡಿಸುವುದು. ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಸಹಾಯವಾಣಿ : ಮಳೆ ಹಾಗೂ ಪ್ರವಾಹ ಸೇರಿದಂತೆ ಇತರೆ ಸಮಸ್ಯೆಗಳ ತುರ್ತು ಪರಿಹಾರಕ್ಕಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ: 08532-226383 ಅಥವಾ ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ: 1077, ರಾಯಚೂರು ಮಹಾನಗರ ಪಾಲಿಕೆ: 08532-200551, ರಾಯಚೂರು ತಹಶೀಲ್ದಾರ್ ಕಾರ್ಯಾಲಯ: 08532-200772, ಮಾನವಿ ತಹಶೀಲ್ದಾರ್ ಕಾರ್ಯಾಲಯ: 08538-220239, ಸಿಂಧನೂರು ತಹಶೀಲ್ದಾರ್ ಕಾರ್ಯಾಲಯ: 9035640154, ಲಿಂಗಸೂಗೂರು ತಹಶೀಲ್ದಾರ್ ಕಾರ್ಯಾಲಯ: 08537-275247, ದೇವದುರ್ಗ ತಹಶೀಲ್ದಾರ್ ಕಾರ್ಯಾಲಯ: 08531-200117, ಸಿರವಾರ ತಹಶೀಲ್ದಾರ್ ಕಾರ್ಯಾಲಯ: 08538-200082, ಮಸ್ಕಿ ತಹಶೀಲ್ದಾರ್ ಕಾರ್ಯಾಲಯ: 08537-295504ಗೆ ಸಾರ್ವಜನಿಕರು ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News