ರಾಯಚೂರು: ಗ್ರಾಮೀಣ ಪ್ರದೇಶಗಳಲ್ಲಿ ಜಾತಿ, ಧರ್ಮ, ಭಾಷೆ ಹಾಗೂ ವರ್ಗಗಳ ಹೆಸರಿನಲ್ಲಿ ಯಾವುದೇ ಭೇದಭಾವ ಮಾಡದೆ ಎಲ್ಲ ಸಮುದಾಯದ ಜನರು ಸಹೋದರರಂತೆ ಬಾಳಬೇಕು. ಗ್ರಾಮಗಳಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮಾಜಿಕ ಸಾಮರಸ್ಯ ಕಾಪಾಡುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡು ಅಭಿವೃದ್ಧಿಯತ್ತ ಸಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಕರೆ ನೀಡಿದ್ದಾರೆ.

ರಾಯಚೂರು ತಾಲೂಕಿನ ಆತಕೂರು ಗ್ರಾಮದಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಸಮಿತಿಯ ವತಿಯಿಂದ ಗ್ರಾಮಸ್ಥರು ಹಾಗೂ ದಲಿತ ಸಮುದಾಯದ ಮುಖಂಡರೊಂದಿಗೆ ಆಯೋಜಿಸಿದ್ದ ಸಮನ್ವಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾಧಿಕಾರಿಯ ನಿರ್ದೇಶನದಂತೆ ಜಿಲ್ಲೆಯ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಗ್ರಾಮಗಳಲ್ಲಿ ಇಂತಹ ಸಮನ್ವಯ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಆತಕೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ನಡುವೆ ಪ್ರಕರಣಗಳು ಹಾಗೂ ಪ್ರತಿದೂರುಗಳು ದಾಖಲಾಗುತ್ತಿರುವುದು ಕಂಡುಬಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲರೂ ಪರಸ್ಪರ ಅರ್ಥ ಮಾಡಿಕೊಂಡು ಶಾಂತಿಯುತವಾಗಿ ಬದುಕಬೇಕು ಎಂದು ಮನವಿ ಮಾಡಿದರು.

ಬಸವಣ್ಣನವರ ವಚನವಾದ 'ಇವನಾರವ, ಇವನಾರವ, ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ, ಇವ ನಮ್ಮವ ಎಂದೆನಿಸಯ್ಯ' ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಎಲ್ಲರೂ ಒಂದೇ ಎಂಬ ಭಾವನೆಯಿಂದ ಪರಸ್ಪರ ಗೌರವದಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾನೂನು ಅರಿವು ಮೂಡಿಸುವುದು ಸಭೆಯ ಉದ್ದೇಶ: ಹರೀಶ್

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹರೀಶ್ ಮಾತನಾಡಿ, ಜಿಲ್ಲಾಧಿಕಾರಿಯ ಆದೇಶದಂತೆ ಪ್ರತೀ ತಿಂಗಳು ಮೊದಲ ವಾರದ ಬುಧವಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಯ್ದ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಹಾಗೂ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ನವೆಂಬರ್ 4ರಂದು ಆತಕೂರು ಗ್ರಾಮದಲ್ಲಿ ಸಮನ್ವಯ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಸಭೆಯಲ್ಲಿ ಮುಕ್ತವಾಗಿ ತಿಳಿಸಬಹುದು. ಜಾತಿ, ಮತ, ಪಂಥ ಎಂಬ ಭೇದಭಾವವಿಲ್ಲದೆ ಪ್ರತಿಯೊಬ್ಬರೂ ಸಾಮರಸ್ಯದಿಂದ ಜೀವನ ನಡೆಸಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಗ್ರಾಮದ ಶಾಂತಿ ಕಾಪಾಡಬೇಕು ಎಂದು ಹೇಳಿದರು.

ಸರಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ

ತಾಲೂಕು ಪಂಚಾಯತ್ ರಾಯಚೂರಿನ ಕಾರ್ಯನಿರ್ವಾಹಕ ಅಧಿಕಾರಿ ಮಾತನಾಡಿ, ಆತಕೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆ ಸುಮಾರು ಶೇ.50ರಷ್ಟಿದೆ. ಈ ಸಮುದಾಯದ ಜನರು ಸೇರಿದಂತೆ ಅರ್ಹ ಫಲಾನುಭವಿಗಳು ಕಾನೂನಿನ ಚೌಕಟ್ಟಿನಲ್ಲಿ ಹಾಗೂ ಸಂವಿಧಾನಬದ್ಧವಾಗಿ ದೊರೆಯುವ ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮದಲ್ಲಿ ಒಟ್ಟು 901 ಶೌಚಾಲಯಗಳಿದ್ದು, ಅವುಗಳಲ್ಲಿ 601 ಶೌಚಾಲಯಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಸೇರಿವೆ. ಶೌಚಾಲಯ ನಿರ್ಮಿಸಿಕೊಳ್ಳಲು ಬಯಸುವ ಅರ್ಹ ಕುಟುಂಬಗಳು ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಸರಕಾರದ ವತಿಯಿಂದ ಪ್ರತೀ ಶೌಚಾಲಯಕ್ಕೆ 20 ಸಾವಿರ ರೂ. ಪ್ರೋತ್ಸಾಹಧನವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅದೇ ರೀತಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಜನರು ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ತಾರತಮ್ಯ ಸಲ್ಲದು: ಕೃಷ್ಣ ಶಾವಂತಗೇರ

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರ ಮಾತನಾಡಿ, ಆತಕೂರು ಗ್ರಾಮದ ಪ್ರತಿಯೊಬ್ಬರೂ ಜಾತಿ, ಮತ, ಧರ್ಮದ ಭೇದವಿಲ್ಲದೆ ಅಣ್ಣ-ತಮ್ಮಂದಿರಂತೆ ಬದುಕಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದು, ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಗೌರವ ದೊರೆಯಬೇಕು ಎಂದು ಹೇಳಿದರು.

ಹೋಟೆಲ್, ದೇವಸ್ಥಾನ, ಶಾಲೆ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡಬಾರದು. ಸಂವಿಧಾನ ಮತ್ತು ಕಾನೂನಿನ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಎಲ್ಲರೂ ಪರಸ್ಪರ ಗೌರವದಿಂದ ನಡೆದುಕೊಂಡು ಗ್ರಾಮದ ಶಾಂತಿ ಮತ್ತು ಸೌಹಾರ್ದ ಕಾಪಾಡಬೇಕು ಎಂದು ತಿಳಿಸಿದರು.

ದೌರ್ಜನ್ಯಕ್ಕೆ ಒಳಗಾದವರು ಕಾನೂನಿನ ನೆರವು ಪಡೆಯಿರಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಸಮಿತಿ ಸದಸ್ಯ ಕೆ.ಇ. ಕುಮಾರ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಪಡದೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ, ಕಾನೂನಿನಡಿ ದೊರೆಯುವ ಸೌಲಭ್ಯ ಹಾಗೂ ನ್ಯಾಯವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಆತಕೂರು ಮಾದರಿ ಗ್ರಾಮವಾಗಲಿ: ತಹಶೀಲ್ದಾರ್

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಮಾತನಾಡಿ, ಆತಕೂರು ಗ್ರಾಮವು ಮಾದರಿ ಗ್ರಾಮವಾಗಿ ರೂಪುಗೊಳ್ಳಬೇಕಾದರೆ ಪ್ರತಿಯೊಬ್ಬರೂ ಜಾತಿ, ಮತ, ಧರ್ಮದ ಭೇದಭಾವಗಳನ್ನು ಬದಿಗಿಟ್ಟು ಪರಸ್ಪರ ಸಹೋದರರಂತೆ ಬದುಕಬೇಕು. ಮಾನವೀಯತೆಯೇ ಎಲ್ಲಕ್ಕಿಂತ ದೊಡ್ಡ ಧರ್ಮ. ನಾವೆಲ್ಲರೂ ಒಂದೇ ಮಾನವ ಕುಲಕ್ಕೆ ಸೇರಿದವರಾಗಿದ್ದು, ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದಿಂದ ಗ್ರಾಮದಲ್ಲಿ ಶಾಂತಿಯ ವಾತಾವರಣ ನಿರ್ಮಿಸಬೇಕು ಎಂದು ಕರೆ ನೀಡಿದರು.

ಗ್ರಾಮದ ಪ್ರತಿಯೊಬ್ಬ ನಾಗರಿಕರೂ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಸಾಮಾಜಿಕ ಸಾಮರಸ್ಯಕ್ಕೆ ಆದ್ಯತೆ ನೀಡಬೇಕು. ಶಿಕ್ಷಣ, ಕಾನೂನು ಅರಿವು ಹಾಗೂ ಸರಕಾರದ ಸೌಲಭ್ಯಗಳ ಸದುಪಯೋಗದ ಮೂಲಕ ಗ್ರಾಮವನ್ನು ಅಭಿವೃದ್ಧಿಯ ಮಾದರಿಯನ್ನಾಗಿ ರೂಪಿಸಬೇಕು ಎಂದು ಹೇಳಿದರು.

ರಾಯಚೂರು ಸಮಾಜ ಕಲ್ಯಾಣ ಇಲಾಖೆಯ ರಾಜಶೇಖರ ವಂದಿಸಿದರು. ಗ್ರಾಮಸ್ಥರು, ದಲಿತ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಮೂಲಕ ಗ್ರಾಮದಲ್ಲಿ ಶಾಂತಿ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor