×
Ad

ಜುಲೈ ತಿಂಗಳ ಕೊನೆಯಲ್ಲಿ ದೇಶದ ಮೊದಲ ‘ಕ್ವಾಂಟಮ್ ಸಮ್ಮೇಳನ’: ಅಗತ್ಯ ಸಿದ್ಧತೆಗೆ ಸಚಿವ ಭೋಸರಾಜು ಸೂಚನೆ

Update: 2025-06-12 19:16 IST

ರಾಯಚೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ಕೇಂದ್ರವನ್ನಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಜುಲೈ ತಿಂಗಳ ಕೊನೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ‘ಕ್ವಾಂಟಮ್ ಸಮ್ಮೇಳನ’ಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ದಿ ಸಚಿವ ಎನ್.ಎಸ್.ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮ್ಮೇಳನದ ತಯಾರಿಯ ಬಗ್ಗೆ ಮಾಹಿತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು, ಕ್ವಾಂಟಮ್ ತಂತ್ರಜ್ಞಾನದಲ್ಲಿನ ಹೊಸ ಆವಿಷ್ಕಾರಗಳು ನಮ್ಮ ದೈನಂದಿನ ಜೀವನದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿವೆ. ಕ್ವಾಂಟಮ್ ತಂತ್ರಜ್ಞಾನವು ಅನೇಕ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆ ತರುವ ಸಾಮರ್ಥ್ಯವನ್ನು ಹೊಂದಿದೆ ಎಂದರು.

ಕ್ವಾಂಟಮ್ ತಂತ್ರಜ್ಞಾನವು, ತಂತ್ರಜ್ಞಾನದಲ್ಲಿ ಸಾಧ್ಯವಿರುವ ಹೊಸ ಸಾಧ್ಯತೆಗಳನ್ನ ತಲುಪಲು ಸಹಾಯಕವಾಗಲಿದೆ. ಹೊಸ ಆವಿಷ್ಕಾರ ಹಾಗೂ ಅಭಿವೃದ್ದಿಗೂ ಕಾರಣವಾಗಲಿದೆ. ಈ ಪ್ರಮುಖ ಕ್ಷೇತ್ರದಲ್ಲಿ ನಮ್ಮ ನಾವೀನ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರಕಾರವು ಈಗಾಗಲೇ ಐಐಎಸ್ಸಿ ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಕ್ವಾಂಟಮ್ ರಿಸರ್ಚ್ ಪಾರ್ಕ್‍ಗೆ ಅಗತ್ಯ ಬೆಂಬಲ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

2025 ಜುಲೈ ತಿಂಗಳಲ್ಲಿ ಎರಡು ದಿನಗಳ ಕಾಲ ಕ್ವಾಂಟಮ್ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ. ಕ್ವಾಂಟಮ್ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ದೇಶಗಳೊಂದಿಗೆ ಸಂಪರ್ಕದಲ್ಲಿದ್ದು, ಜ್ಞಾನ ವಿನಿಮಯಕ್ಕೆ ಸಭೆಗೆ ಸಮಯಕ್ಕೆ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರ ನಿರ್ದೇಶನದಂತೆ ನಮ್ಮ ರಾಜ್ಯ ಕ್ವಾಂಟಮ್ ಕ್ಷೇತ್ರದಲ್ಲಿ ಹೊಸ ಸಾಧನೆಗೆ ಉತ್ತೇಜಿಸುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್‍ರೂಪ್ ಕೌರ್, ಕೆಸ್ಪೆಪ್ಸ್ ವ್ಯವಸ್ಥಾಪಕ ನಿರ್ದೇಶಕ ಸದಾಶಿವ ಪ್ರಭು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News