×
Ad

ದೇವದುರ್ಗ | ಕುಡಿಯುವ ನೀರು, ಮೂಲಸೌಕರ್ಯಕ್ಕೆ ಮೊದಲ ಆದ್ಯತೆ ನೀಡಿ : ಶಾಸಕಿ ಕರೆಮ್ಮ‌ ಜಿ.ನಾಯಕ್

ಟಾಸ್ಕ್‌ಫೋರ್ಸ್ ಸಭೆ

Update: 2026-07-15 19:20 IST

ದೇವದುರ್ಗ : ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೂಲಸೌಕರ್ಯದ ಸಮಸ್ಯೆ ಉಂಟಾಗದಂತೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಶಾಸಕಿಯರಾದ ಕರೆಮ್ಮ ಜಿ. ನಾಯಕ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಟಾಸ್ಕ್‌ಫೋರ್ಸ್ ತುರ್ತು ಸಭೆಯಲ್ಲಿ ಬರಗಾಲ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಪರಿಶೀಲನೆ ನಡೆಸಿದ ಅವರು, ಶುದ್ಧ ಕುಡಿಯುವ ನೀರಿನ ಘಟಕಗಳು ಮತ್ತು ಸಮಸ್ಯಾತ್ಮಕ ಗ್ರಾಮಗಳ ಕುರಿತು ಅಧಿಕಾರಿಗಳು ನೀಡಿದ ಮಾಹಿತಿಯನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

171 ಶುದ್ಧ ನೀರಿನ ಘಟಕಗಳಲ್ಲಿ 98 ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 19 ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕಿ, ಗ್ರಾಮಸ್ಥರು ನೀರಿನ ಸಮಸ್ಯೆ ಕುರಿತು ನಿರಂತರ ದೂರು ನೀಡುತ್ತಿದ್ದಾರೆ. ಸಭೆಯಲ್ಲಿ ತಪ್ಪು ಮಾಹಿತಿ ನೀಡಬಾರದು. ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಹೇಗೆ ಹಸ್ತಾಂತರ ಮಾಡಿಕೊಳ್ಳಲಾಯಿತು ಎಂದು ಜಲ್ ಜೀವನ್ ಮಿಷನ್ (ಜೆಜೆಎಂ) ಅಧಿಕಾರಿಗಳನ್ನು ಪ್ರಶ್ನಿಸಿದರು.

ಜೆಸ್ಕಾಂ ಅಧಿಕಾರಿಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಅವರು, ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ಸಮಸ್ಯೆಗಳನ್ನು ತಕ್ಷಣ ಬಗೆಹರಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಿಡಿಒಗಳು ಸ್ಥಳೀಯ ಮಟ್ಟದಲ್ಲೇ ಕಾರ್ಯನಿರ್ವಹಿಸಿ, ಎಲ್ಲ ಗ್ರಾಮಗಳಲ್ಲಿ ಕಡ್ಡಾಯವಾಗಿ ಗ್ರಾಮಸಭೆ ನಡೆಸಬೇಕು. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಗ್ರಾಮಗಳ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ತಹಶಿಲ್ದಾರ‌ ನಾಗಮ್ಮ ಕಟ್ಟಮನಿ, ಕಾರ್ಯ ನಿರ್ವಾಹಕ ಅಧಿಕಾರಿಗಳಾದ ವಾಲ್ಮೀಕಿ, ಅರಕೇರ ತಹಶಿಲ್ದಾರ ಅಮರೇಶ,ಕೃಷಿ ಅಧಿಕಾರಿ ಶ್ರೀನಿವಾಸ, ಜೆಸ್ಕಾಂ‌ ಅಧಿಕಾರಿ ಶ್ರೀನಿವಾಸ, ಕ್ಷೇತ್ರ ಶಿಕ್ಷಣಾಧಿಕಾರಿ ರಾಧಾಬಾಯಿ, ಸಮನ್ವಯ ಅಧಿಕಾರಿ ಶಿವರಾಜ ಪೂಜಾರಿ, ಸಮಾಜ ಕಲ್ಯಾಣ ಅಧಿಕಾರಿ ರಾಜಕುಮಾರ, ಲೋಕೋಪಯೋಗಿ ಇಲಾಖೆ ಅಧಿಕಾರಿ ಶ್ರೀನಿವಾಸ ‌ಮತ್ತಿತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News