79ನೇ ಸ್ವಾತಂತ್ರ್ಯ ದಿನಾಚರಣೆ | ಧ್ವಜಾರೋಹಣ ನೆರವೇರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
"ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧ"
ರಾಯಚೂರು : ʼರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ರಾಜ್ಯ ಸರಕಾರವು ಬದ್ಧವಾಗಿದೆʼ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್ ಅವರು ಹೇಳಿದರು.
ನಗರದ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಜಿಲ್ಲೆಯ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.
ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾಥೆಯು ಅತ್ಯಂತ ರೋಚಕವಾಗಿದೆ. ಸತ್ಯ ಮತ್ತು ಅಹಿಂಸೆಯ ಮಾರ್ಗದಿಂದ ನಾವು ಸ್ವಾತಂತ್ರ್ಯ ಪಡೆದುಕೊಂಡಿದ್ದೇವೆ. ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನಿಯರ ತ್ಯಾಗ, ಬಲಿದಾನ, ದೂರದೃಷ್ಠಿ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದರು.
ನಮ್ಮ ದೇಶದ ಭವ್ಯ ಇತಿಹಾಸದ ಹಿನ್ನೆಲೆಯಲ್ಲಿ ನಾವು ಮುಂದಿನ ಭಾರತ ಕಟ್ಟಡಬೇಕಿದೆ. ಇದು ಆಗಬೇಕಾದರೆ ನಾಡಿನಲ್ಲಿ ಶಾಂತಿ ನೆಲಸಬೇಕು. ಎಲ್ಲರೂ ಒಗ್ಗೂಡಿ ಬಾಳಬೇಕು. ಈ ಹಿನ್ನೆಲೆಯಲ್ಲಿ ಆಲೋಚಿಸಿ ಡಾ.ಅಂಬೇಡ್ಕರ್ ಅವರು ಎಲ್ಲರಿಗೂ ಸಂವಿಧಾನ ಬದ್ಧವಾಗಿ ಅಭಿವ್ಯಕ್ತಿಯ ಹಕ್ಕು, ಜೀವಿಸುವ ಹಕ್ಕು, ಧಾರ್ಮಿಕ ಹಕ್ಕು ಸೇರಿದಂತೆ ಅನೇಕ ಹಕ್ಕುಗಳನ್ನು ಕಲ್ಪಿಸಿದರು. ನಾವೆಲ್ಲರೂ ಈ ಸಮಾಜಮುಖಿ ಹಕ್ಕುಗಳು ಮತ್ತು ನಮ್ಮ ಕರ್ತವ್ಯ ಅರಿತು ಈ ನಾಡನ್ನು ಕಟ್ಟಬೇಕಿದೆ ಎಂದರು.
ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ತಾಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ, ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ಸಹಾಯಕ ಆಯುಕ್ತರಾದ ಗಜಾನನ ಬಾಳೆ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಯಶೋಧಾ ಹಾಗೂ ಮಹೇಶ್ವರಿ ಅವರು ನಿರ್ವಹಿಸಿದರು.