ರಾಯಚೂರು ಸೇರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರಲಿ : ಸಿದ್ದರಾಮಯ್ಯ
ರಾಯಚೂರು : ಬಿಸಿಲಿನ ತಾಪಮಾನ ಅತೀ ಹೆಚ್ಚು ಇರುವ ರಾಯಚೂರು ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಸಹ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಸರಬರಾಜಿಗೆ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಹೇಳಿದರು.
ಮೇ 5ರಂದು, ಸಂಜೆ ರಾಜ್ಯದ ವಿವಿಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಪರಿಸ್ಥಿತಿಯ ಕುರಿತು ಚರ್ಚಿಸಿದರು.
ಕಳೆದ ವರ್ಷಕ್ಕಿಂತ ಈ ವರ್ಷ ಕುಡಿಯುವ ನೀರಿನ ಅಭಾವ ಕಡಿಮೆ ಇದೆ. ಆದರೂ ಸಹ ಅಗತ್ಯ ಇರುವ ಕಡೆಗೆ ಟ್ಯಾಂಕರ್ ಮುಖಾಂತರ ಹಾಗೂ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದರು.
ಕುಡಿಯುವ ನೀರಿನ ಸಲುವಾಗಿ ಯಾವುದೇ ಜಿಲ್ಲೆಯಲ್ಲಿ ಹಣದ ಕೊರತೆ ಇಲ್ಲ. ಆದ್ಯತೆ ಮೇರೆಗೆ ಜನತೆಗೆ ಕುಡಿಯುವ ನೀರನ್ನು ಒದಗಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಿಗೆ ಸಂಗ್ರಹಣೆಯಲ್ಲಿ ಶೇ.30ರಷ್ಟು ತೆರಿಗೆ ಹಣವನ್ನು ಕುಡಿಯುವ ನೀರಿಗೆ ಬಳಸಕೊಂಡು ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ಮಾಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ, ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವರಾಜ ಕೆಸರಟ್ಟಿ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮ, ದೇವದುರ್ಗ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಯಪ್ರಕಾಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಚಿದಾನಂದ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.