ರಾಯಚೂರು ಜಿಲ್ಲಾ ನೂತನ ಡಿಎಚ್‌ಒ ಆಗಿ ಡಾ.ನಂದಿತಾ ಅಧಿಕಾರ ಸ್ವೀಕಾರ

Update: 2026-07-17 20:20 IST

ರಾಯಚೂರು : ಜಿಲ್ಲೆಯ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)ಯಾಗಿ ಡಾ. ನಂದಿತಾ ಎಂ.ಎನ್. ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಡಿಎಚ್‌ಒ ಡಾ. ಸುರೇಂದ್ರ ಬಾಬು ಅವರಿಂದ ಅಧಿಕಾರವನ್ನು ಅಧಿಕೃತವಾಗಿ ಸ್ವೀಕರಿಸಿದರು.

ಬಳಿಕ ಮಾತನಾಡಿದ ಡಾ. ನಂದಿತಾ ಎಂ.ಎನ್., ಜಿಲ್ಲೆಯ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ತಾಯಿ ಮತ್ತು ಶಿಶು ಆರೋಗ್ಯ, ಕ್ಷಯರೋಗ ನಿರ್ಮೂಲನೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಲಸಿಕಾ ಕಾರ್ಯಕ್ರಮ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ಸೇರಿದಂತೆ ಇಲಾಖೆಯ ಎಲ್ಲ ಯೋಜನೆಗಳನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ ಸಮರ್ಪಕವಾಗಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು ಹಾಗೂ ಸಿಬ್ಬಂದಿ ನೂತನ ಡಿಎಚ್‌ಒ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News