ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ : ಜ್ಯೋತಿ ರಥಯಾತ್ರೆಗೆ ಸಿದ್ಧತೆ
ರಾಯಚೂರು :ರಾಯಚೂರು ಜಿಲ್ಲೆಯಲ್ಲಿ 2026ರ ಫೆಬ್ರ.5, 6 ಮತ್ತು 7 ರಂದು ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಡೆಯುವ ಜ್ಯೋತಿ ರಥಯಾತ್ರೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ.
ಜ್ಯೋತಿ ರಥಯಾತ್ರೆಯು ಮಾನವಿ, ಸಿಂಧನೂರು, ಮಸ್ಕಿ, ಲಿಂಗಸೂರು, ಕವಿತಾಳ, ದೇವದುರ್ಗ, ಗಬ್ಬೂರು, ಅರಕೇರಾ, ಸಿರವಾರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ರಾಯಚೂರು ಉತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ನಾನಾ ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಮಾಹಿತಿಯನ್ನು ಜನತೆಗೆ ತಲುಪಿಸುವ ಉದ್ದೇಶದಿಂದ ಈ ರಥಯಾತ್ರೆ ಆಯೋಜಿಸಲಾಗಿದೆ.
ಫೆ.1 ರಂದು ಬೆಳಿಗ್ಗೆ 10 ಗಂಟೆಗೆ ರಾಯಚೂರು ನಗರದ ಕರ್ನಾಟಕ ಸಂಘದಿಂದ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಜೊತೆಗೆ ಶಾಲಾ–ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜ್ಯೋತಿ ರಥಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಮನವಿ ಮಾಡಿದ್ದಾರೆ.