ಈದ್ ಮಿಲಾದ್ | ರಾಯಚೂರು ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ರಾಯಚೂರು, ಆ.25: ಜಿಲ್ಲೆಯಾದ್ಯಂತ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರ್ಮಿಕ ಪ್ರಾರ್ಥನೆಗಳು ಹಾಗೂ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂವಿತಾ ಎಸ್. ಅವರು ಅಬಕಾರಿ ಕಾಯ್ದೆ 1965ರ ಕಲಂ 21(1)ರ ಅನ್ವಯ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಆದೇಶದಂತೆ ಆಗಸ್ಟ್ 25ರ ರಾತ್ರಿ 10 ಗಂಟೆಯಿಂದ ಆಗಸ್ಟ್ 27ರ ಬೆಳಿಗ್ಗೆ 6 ಗಂಟೆಯವರೆಗೆ ರಾಯಚೂರು ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಕೆ ಹಾಗೂ ಸಂಗ್ರಹಣೆಯನ್ನು ನಿಷೇಧಿಸಲಾಗಿದೆ.
ನಿಗದಿತ ಅವಧಿಯಲ್ಲಿ ಎಲ್ಲಾ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯ ಸಾಗಾಣಿಕೆ ಮತ್ತು ಸಂಗ್ರಹಣಾ ಕೇಂದ್ರಗಳು ಹಾಗೂ ಮಾರಾಟ ಮಳಿಗೆಗಳನ್ನು ಕಡ್ಡಾಯವಾಗಿ ಬಂದ್ ಇಡುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿದ್ದಾರೆ.
ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.