×
Ad

ಹಟ್ಟಿ | ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ರಸ್ತೆತಡೆ ಪ್ರತಿಭಟನೆ

ಹೆಚ್ಚುವರಿ ಬಸ್‌ಗಳ ನಿಯೋಜನೆಗೆ ಒತ್ತಾಯ

Update: 2026-07-14 17:35 IST

ಹಟ್ಟಿ : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಮೀಪದ ಮೇದಿನಾಪೂರು ಗ್ರಾಮದ ವಿದ್ಯಾರ್ಥಿಗಳು ಮಂಗಳವಾರ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಿದರು.

ಮೇದಿನಾಪೂರು ಗ್ರಾಮದ ಬಸ್ ನಿಲ್ದಾಣದ ಬಳಿ ಜಮಾಯಿಸಿದ ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶಗಳಿಂದ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುವವರಿಗೆ ನಿಗದಿತ ಸಮಯಕ್ಕೆ ಬಸ್‌ಗಳು ಲಭ್ಯವಾಗುತ್ತಿಲ್ಲ. ಇದರಿಂದ ಪ್ರತಿದಿನ ತರಗತಿಗಳಿಗೆ ತಡವಾಗಿ ತಲುಪುವಂತಾಗುತ್ತಿದ್ದು, ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಬಸ್‌ಗಳನ್ನು ತಡೆದು ರಸ್ತೆಯಲ್ಲೇ ಕುಳಿತು ಸರ್ಕಾರ ಹಾಗೂ ಸಾರಿಗೆ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಪರಿಣಾಮ ಕೆಲಕಾಲ ಸಾರಿಗೆ ಸಂಸ್ಥೆಯ ಬಸ್‌ಗಳು ಸೇರಿದಂತೆ ಇತರೆ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು.

ವಿದ್ಯಾರ್ಥಿಗಳ ಪ್ರತಿಭಟನೆಗೆ ಮೇದಿನಾಪೂರು ಗ್ರಾಮದ ಗ್ರಾಮಸ್ಥರು ಹಾಗೂ ಹಿರಿಯರು ಬೆಂಬಲ ವ್ಯಕ್ತಪಡಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾರಿಗೆ ಸಮಸ್ಯೆ ದೊಡ್ಡ ಅಡ್ಡಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಸಾರಿಗೆ ಇಲಾಖೆಯ ಅಧಿಕಾರಿಗಳು ಅಥವಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಸೂಕ್ತ ಭರವಸೆ ನೀಡುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.

ಪ್ರತಿಭಟನೆಯಲ್ಲಿ ಪರಶುರಾಮ, ಅಮರಪ್ಪ, ಮಲ್ಲು, ರಾಯಪ್ಪ, ಪ್ರಶಾಂತ, ಚನ್ನಪ್ಪ, ರಮೇಶ, ರಾಘವೇಂದ್ರ ಸೇರಿದಂತೆ ಅನೇಕ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಹಿರಿಯರು ಭಾಗವಹಿಸಿದ್ದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸುವಲ್ಲಿ ಸ್ಥಳೀಯ ಶಾಸಕ ಮಾನಪ್ಪ ವಜ್ಜಲ್ ಹಾಗೂ ಸಾರಿಗೆ ಸಂಸ್ಥೆಯ ಡಿಪೋ ವ್ಯವಸ್ಥಾಪಕರು ವಿಫಲರಾಗಿದ್ದಾರೆ. ಮೇದಿನಾಪೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಪ್ರತಿದಿನ ಬಸ್ ಸಮಸ್ಯೆಯಿಂದ ಶಿಕ್ಷಣಕ್ಕೆ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳೊಂದಿಗೆ ಸೇರಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಸಿದರು.

-ರಮೇಶ ಜೆ., ಎಸ್‌ಎಫ್‌ಐ ತಾಲೂಕು ಮುಖಂಡ



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News