×
Ad

ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಸದೆ ನಿರ್ಲಕ್ಷ್ಯ ವಹಿಸಿದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ನಿತೀಶ್ ಕೆ.

Update: 2025-07-11 22:35 IST

ರಾಯಚೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿನ ಮಟ್ಟದಲ್ಲಿದ್ದು, ಈ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜು.9ರ ಗುರುವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ 2025ರ ಜೂನ್ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೌಲಭ್ಯಗಳನ್ನು ಒದಗಿಸಲು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಿ ಪಟ್ಟಿ ಮಾಡಬೇಕು. ಅರ್ಜಿಗಳನ್ನು ಆಹ್ವಾನಿಸಿದ್ದಲ್ಲಿ ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಕೈಗೊಂಡು ಪಟ್ಟಿ ಸಿದ್ಧಪಡಿಸಬೇಕು. ಫಲಾನುಭವಿಗಳಿಗೆ ಆದಷ್ಟು ಶೀಘ್ರವೇ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ರೈತರಿಗೆ ರೇಷ್ಮೆ ಬೆಳೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳು ಕುರಿತು ಅವರಿಗೆ ಮನವರಿಕೆ ಮಾಡಬೇಕು. ರೇಷ್ಮೆ ಬೆಳೆಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ್, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ, ಪಂಚಾಯತ್ ರಾಜ್ ಇಂಜನಿಯರ ವಿಭಾಗದ ಸಹಾಯಕ ಅಭಿಯಂತರರಾದ ಚಂದ್ರಕಲಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧಿಕಾರಿ ರಾಜೇಂದ್ರ ಜಲ್ದಾರ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News