×
Ad

ಲಿಂಗಸುಗೂರು | ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿಗಳಿಂದ ಧ್ವಜಾರೋಹಣ ಮಾಡದೇ ನಿಯಮ ಉಲ್ಲಂಘನೆ : ಆರೋಪ

Update: 2026-01-26 11:56 IST

ಲಿಂಗಸುಗೂರು : ಲಿಂಗಸುಗೂರು ತಾಲೂಕಿನ ದೇವರ ಭೂಪೂರು ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜಾರೋಹಣ ಮಾಡದಿರುವುದು ಬೆಳಕಿಗೆ ಬಂದಿದ್ದು, ಸಹಕಾರ ಸಂಘದ ಆಡಳಿತ ವರ್ಗ ಹಾಗೂ ಸಿಬ್ಬಂದಿಗಳ ಬೇಜವಾಬ್ದಾರಿತನಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸರ್ಕಾರಿ ಹಾಗೂ ಸಹಕಾರಿ ಸಂಸ್ಥೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಕಡ್ಡಾಯವಾಗಿ ಆಚರಿಸಬೇಕು ಎಂಬ ಸರ್ಕಾರದ ಸ್ಪಷ್ಟ ನಿರ್ದೇಶನಗಳಿದ್ದರೂ, ಸಹಕಾರ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಅವುಗಳನ್ನು ಲೆಕ್ಕಿಸದೇ ನಡೆದುಕೊಂಡಿದ್ದು, ಇದು ರಾಷ್ಟ್ರಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತಾಗಿದೆ ಎಂದು ಆರೋಪಿಸಲಾಗಿದೆ.

ಸಾರ್ವಜನಿಕ ಹಣ ಮತ್ತು ಸದಸ್ಯರ ವಿಶ್ವಾಸದ ಮೇಲೆ ಕಾರ್ಯನಿರ್ವಹಿಸುವ ಸಹಕಾರಿ ಸಂಘವು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು ಅದರ ಮೂಲಭೂತ ಕರ್ತವ್ಯವಾಗಿದೆ. ಆದರೆ ಗಣರಾಜ್ಯೋತ್ಸವದ ದಿನ ಯಾವುದೇ ಸಿದ್ಧತೆ ಕೈಗೊಳ್ಳದೇ, ಧ್ವಜಾರೋಹಣ ಕಾರ್ಯಕ್ರಮ ನಡೆಸದೆ ಹಬ್ಬವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. 

ಈ ಕುರಿತು ಸಹಕಾರಿ ಸಂಘದ ಆಡಳಿತ ಮಂಡಳಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ತಾಲೂಕು ಆಡಳಿತವು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಹಾಗೂ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.









Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News