Lingsugur | ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ಲಿಂಗಸುಗೂರು: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು, ಕನಿಷ್ಠ ವೇತನ ಜಾರಿಗೊಳಿಸಬೇಕು ಹಾಗೂ ಗುತ್ತಿಗೆ ಮತ್ತು ವಿವಿಧ ಸ್ಕೀಮ್ ನೌಕರರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಶಾಸಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳಿಗೆ ಧಕ್ಕೆ ತರುವಂತಿವೆ ಎಂದು ಆರೋಪಿಸಿದರು. ಅವುಗಳನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಕಾರ್ಮಿಕರಿಗೆ ಸಮರ್ಪಕ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಅಂಗನವಾಡಿ, ಆಶಾ, ಅಕ್ಷರ ದಾಸೋಹ (ಬಿಸಿಯೂಟ) ಸೇರಿದಂತೆ ವಿವಿಧ ಸ್ಕೀಮ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂ ನೌಕರರೆಂದು ಪರಿಗಣಿಸಿ, ಅವರಿಗೆ ಸೂಕ್ತ ವೇತನ, ಸಾಮಾಜಿಕ ಭದ್ರತೆ ಹಾಗೂ ಇತರ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯು ತಾಲೂಕು ಸಂಚಾಲಕ ಮುಹಮ್ಮದ್ ಹನೀಫ್, ನಿಂಗಪ್ಪ ನಿಲೋಗಲ್, ಫಕೃದ್ದೀನ್ ಮುಲ್ಲಾ, ಮಲ್ಲನಗೌಡ, ವೆಂಕಟೇಶ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.