Lingsugur | ಸತೀಶ್ ಜಾರಕಿಹೊಳಿ ಮೇಲಿನ ಈಡಿ ದಾಳಿ ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ
ಲಿಂಗಸುಗೂರು: ಸಚಿವ ಸತೀಶ ಜಾರಕಿಹೊಳಿ ಅವರ ಮೇಲಿನ ಜಾರಿ ನಿರ್ದೇಶನಾಲಯದ (ಈಡಿ) ದಾಳಿಯನ್ನು ಖಂಡಿಸಿ ಕಾಂಗ್ರೆಸ್, ಅಹಿಂದ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ, ಕಾಂಗ್ರೆಸ್‌ನ ಜನಪ್ರಿಯ ನಾಯಕರ ವಿರುದ್ಧ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ದೀನದಲಿತರು ಹಾಗೂ ಬಡವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ವರ್ಚಸ್ಸಿಗೆ ಧಕ್ಕೆ ತರಲು ಇಂತಹ ದಾಳಿಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ಇದೇ ವೇಳೆ, ಈಡಿ ದಾಳಿಗೆ ಒಳಗಾದ ನಂತರ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರು. ಅದೇ ರೀತಿಯಲ್ಲಿ ಸತೀಶ ಜಾರಕಿಹೊಳಿ ಅವರೂ ಮುಂದೊಂದು ದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಅಭಿಪ್ರಾಯವನ್ನು ಶರಣಗೌಡ ಪಾಟೀಲ ವ್ಯಕ್ತಪಡಿಸಿದರು.
ಹಿರಿಯ ಕಾಂಗ್ರೆಸ್ ಮುಖಂಡ ಅಮರಗುಂಡಪ್ಪ ಮೇಟಿ ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ಅನಾಥಾಶ್ರಮಗಳಿಗೆ ನೆರವು ನೀಡುತ್ತಿದ್ದು, ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುತ್ತಿದ್ದಾರೆ. ಕಾಂಗ್ರೆಸ್‌ನ ಜನಪ್ರಿಯ ನಾಯಕರನ್ನು ತನಿಖಾ ಸಂಸ್ಥೆಗಳ ಮೂಲಕ ಬೆದರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಯೋಜನೆ ಜಿಲ್ಲಾ ಘಟಕದ ಅಧ್ಯಕ್ಷ ಪಾಮಯ್ಯ ಮುರಾರಿ ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಯಾಗಿದ್ದು,ಈಡಿ ದಾಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಕಾನೂನು ಹೋರಾಟದ ಮೂಲಕ ಸತ್ಯ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಮಾತನಾಡಿ, ಸತೀಶ್ ಜಾರಕಿಹೊಳಿ ಅವರ ಜನಪ್ರಿಯತೆಯನ್ನು ಸಹಿಸಲಾಗದೆ ಅವರ ವಿರುದ್ಧ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕರ ವಿರುದ್ಧ ರಾಜಕೀಯ ಪಿತೂರಿಯಿಂದ ದಾಳಿಗಳು ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ, ಡಿ.ಜಿ. ಗುರಿಕಾರ, ಗುಂಡಪ್ಪ ನಾಯಕ, ವೆಂಕಟೇಶ ಗುತ್ತೆದಾರ, ಅಮರೇಶ ಹೆಸರೂರು ಸೇರಿದಂತೆ ಕಾಂಗ್ರೆಸ್ ಮುಖಂಡರು, ದಲಿತ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.