ಬರ ಪರಿಸ್ಥಿತಿ ಪರಿಶೀಲನೆಗೆ ಆ.7, 8ರಂದು ಸಚಿವ ಡಾ.ಅಜಯ್ ಧರ್ಮಸಿಂಗ್ ರಾಯಚೂರು ಪ್ರವಾಸ
ರಾಯಚೂರು : ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯ ಪರಿಶೀಲನೆಗಾಗಿ ಸಂಪುಟ ಸಚಿವ ಡಾ. ಅಜಯ್ ಧರ್ಮಸಿಂಗ್ ಅವರು ಆ.7 ಮತ್ತು 8ರಂದು ರಾಯಚೂರು ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಸಚಿವರು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿ, ಕುಡಿಯುವ ನೀರಿನ ಲಭ್ಯತೆ ಹಾಗೂ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ಪ್ರವಾಸದ ವಿವರ :
ಆ.7ರಂದು (ಶುಕ್ರವಾರ) ರಾಯಚೂರು ಗ್ರಾಮಾಂತರ, ದೇವದುರ್ಗ, ಲಿಂಗಸುಗೂರು ಹಾಗೂ ಮಸ್ಕಿ ತಾಲೂಕುಗಳಿಗೆ ಭೇಟಿ ನೀಡಲಿದ್ದು, ಬಳಿಕ ಲಿಂಗಸುಗೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆ.8ರಂದು ಲಿಂಗಸುಗೂರಿನಿಂದ ಸಿಂಧನೂರು, ಮಾನ್ವಿ ಹಾಗೂ ರಾಯಚೂರು ತಾಲೂಕುಗಳಿಗೆ ಭೇಟಿ ನೀಡಿ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಲಭ್ಯತೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.