ರಾಯಚೂರು ಜಿಲ್ಲಾ ಉಸ್ತುವಾರಿಯಾಗಿ ಸಚಿವ ಡಾ.ಅಜಯಸಿಂಗ್ ನೇಮಕ

Update: 2026-08-14 22:06 IST

ರಾಯಚೂರು: ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯಸಿಂಗ್ ಅವರನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಡಾ. ಅಜಯಸಿಂಗ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿತ್ತು. ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಅವರು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡಿದ್ದರು. ಜಿಲ್ಲಾಡಳಿತ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರೈತರ ಸಮಸ್ಯೆಗಳನ್ನು ಆಲಿಸುವ ಜತೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ವಾಸ್ತವ ಪರಿಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಿದ್ದರು.

ಅಂದಿನಿಂದಲೇ ಡಾ. ಅಜಯಸಿಂಗ್ ಅವರನ್ನೇ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ಚರ್ಚೆ ನಡೆದಿತ್ತು. ಇದೀಗ ಅದಕ್ಕೆ ಅಧಿಕೃತ ಆದೇಶ ಹೊರಬಿದ್ದಿದೆ.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಡಾ.ಶರಣಪ್ರಕಾಶ್‌ ಪಾಟೀಲ್ ಅವರು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಆದರೆ ಅವರು ಕೇವಲ ಧ್ವಜಾರೋಹಣ ಕಾರ್ಯಕ್ರಮಗಳಿಗೆ ಸೀಮಿತರಾಗಿದ್ದರು ಎಂಬ ಟೀಕೆಗಳು ಕೇಳಿಬಂದಿದ್ದವು. ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಾಭಿಪ್ರಾಯದ ನಡುವೆಯೂ ಇದೀಗ ಡಾ.ಅಜಯಸಿಂಗ್ ಅವರಿಗೆ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ.

ಬರ ಪರಿಸ್ಥಿತಿ, ರೈತರ ಸಮಸ್ಯೆ, ಕುಡಿಯುವ ನೀರು ಸೇರಿದಂತೆ ಜಿಲ್ಲೆಯ ಹಲವು ಸವಾಲುಗಳಿರುವ ಸಂದರ್ಭದಲ್ಲಿ ನೂತನ ಉಸ್ತುವಾರಿ ಸಚಿವರು ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News