ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ
ಬಸನಗೌಡ ದದ್ದಲ್
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ದದ್ದಲ್, ಸ್ವಇಚ್ಛೆಯಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ದದ್ದಲ್ ಅವರ ಈ ಹಠಾತ್ ನಿರ್ಧಾರ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಅವರ ಮುಂದಿನ ರಾಜಕೀಯ ನಡೆ ಕುರಿತು ಕುತೂಹಲ ಮೂಡಿಸಿದೆ.
ರಾಜೀನಾಮೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆದರೆ, ಪಕ್ಷದೊಳಗಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.
ಪಕ್ಷದ ಕೆಲ ನಾಯಕರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ದದ್ದಲ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇತರ ನಿಗಮ-ಮಂಡಳಿಗಳ ಅಧ್ಯಕ್ಷರ ರಾಜೀನಾಮೆ ಕುರಿತು ಯಾವುದೇ ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ಈ ಹಿನ್ನೆಲೆಯಲ್ಲಿ ಬಸನಗೌಡ ದದ್ದಲ್ ಅವರ ನಡೆ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.