ಮೇಲ್ಛಾವಣಿ ಕುಸಿದು ಮೃತಪಟ್ಟ ಕುಟುಂಬಕ್ಕೆ ಅಗತ್ಯ ನೆರವು: ಸಂಸದ ಜಿ. ಕುಮಾರ ನಾಯಕ
ಕಟ್ಟಡ ಮಾಲೀಕರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ
ದೇವದುರ್ಗ: ದೇವದುರ್ಗ ಪಟ್ಟಣದಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಯುವಕರು ಮೃತಪಟ್ಟ ದುರಂತ ಸ್ಥಳಕ್ಕೆ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ದುರಂತದ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡು ವಿಚಾರಣೆ ನಡೆಸಿದರು.
ಮೃತರಿಗೆ ಸಂತಾಪ ಸೂಚಿಸಿ, ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ದೊರಕುವಂತೆ ಮುಖ್ಯಮಂತ್ರಿ ಅವರ ಜೊತೆ ವೈಯಕ್ತಿಕವಾಗಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ದುರಂತಕ್ಕೆ ಕಾರಣವಾದ ಕಟ್ಟಡದ ಮಾಲೀಕರು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ನಿರ್ಲಕ್ಷ್ಯ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಭವಿಷ್ಯದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಪಟ್ಟಣ ವ್ಯಾಪ್ತಿಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳ ಸಮೀಕ್ಷೆ ನಡೆಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ರಾಜಶೇಖರ್ ನಾಯಕ್, ರಾಮಣ್ಣ ಇರಬಗೇರಾ, ಶರಣಗೌಡ ಗೌರಂಪೇಟೆ, ಜಯಂತರಾವ್ ಪತಂಗೆ, ಆದನಗೌಡ ಬುಂಕಲದೊಡ್ಡಿ, ಶಿವರಾಜ ಗೆಜ್ಜೆಬಾವಿ, ದೇವದುರ್ಗ ತಹಶೀಲ್ದಾರ್ ಮತಿ ನಾಗಮ್ಮ ಕಟ್ಟಿಮನಿ, ಪುರಸಭೆಯ ಪೌರಾಯುಕ್ತರು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.