×
Ad

NEET ಪರೀಕ್ಷೆ: ಕಾಂಗ್ರೆಸ್ ನಿಂದ ಜೂ.25ರಿಂದ ಆ.9ರವರೆಗೆ ಜನಾಂದೋಲನ

Update: 2026-06-27 18:10 IST

ರಾಯಚೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷ ಜೂನ್ 25ರಿಂದ ಆಗಸ್ಟ್ 9ರವರೆಗೆ ರಾಜ್ಯಾದ್ಯಂತ ಜನಜಾಗೃತಿ ಆಂದೋಲನ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ್‌ ಇಟಗಿ ತಿಳಿಸಿದರು.

ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮದಿಂದ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಸಚಿವಾಲಯ ವಿಫಲವಾಗಿರುವುದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿದೆ ಎಂದು ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಆರೋಪಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಶಿಕ್ಷಣ ಮಾಫಿಯಾದ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಇದರ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕೇಂದ್ರ ಶಿಕ್ಷಣ ಸಚಿವಾಲಯದ ವೈಫಲ್ಯವನ್ನು ಜನರಿಗೆ ತಿಳಿಸಲು ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಕಾಂಗ್ರೆಸ್ ವತಿಯಿಂದ ಜನಜಾಗೃತಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಮಾಧ್ಯಮ ವಕ್ತಾರ ಡಾ. ರಝಾಕ್ ಉಸ್ತಾದ್ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ದೇಶದ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಆಘಾತವಾಗಿದೆ. ಪ್ರಕರಣದಲ್ಲಿ ಕೆಲವರ ಬಂಧನ ನಡೆದಿದ್ದರೂ, ಹೊಣೆಗಾರರ ವಿರುದ್ಧ ಇನ್ನೂ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಈ ವೇಳೆ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಎನ್. ಶ್ರೀನಿವಾಸರೆಡ್ಡಿ, ಮುಖಂಡ ಅಸ್ಲಂ ಪಾಷಾ, ದರೂರು ಬಸವರಾಜ, ಅಂಜಿನಕುಮಾರ, ಆಂಜಿನಯ್ಯ ಕುರುಬದೊಡ್ಡಿ, ತಲಕಾಯಿ ಮಾರೆಪ್ಪ, ದಸ್ತಗೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News