ರೈತರ ನೆರವಿಗೆ ಅಧಿಕಾರಿಗಳು ಧಾವಿಸಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು: ಸಚಿವ ಡಾ.ಅಜಯ್ ಧರ್ಮಸಿಂಗ್

ಜಿಲ್ಲೆಯ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ

Update: 2026-08-08 18:37 IST

ರಾಯಚೂರು: ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಅಧಿಕಾರಿಗಳು ಧಾವಿಸಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರದ ನೂತನ ಸಚಿವ ಡಾ.ಅಜಯ್ ಧರ್ಮಸಿಂಗ್ ಸೂಚಿಸಿದರು.

ಆ. 8ರಂದು ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಮುಂಗಾರು ಹಂಗಾಮಿನ ಬಿತ್ತನೆ, ರಸಗೊಬ್ಬರ ಬೇಡಿಕೆ ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸೂಚನೆಯಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಂಪುಟ ಸಭೆಯ ತೀರ್ಮಾನ ಹಾಗೂ ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ವರದಿ ಸಿದ್ಧಪಡಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಹಾಗೂ ಸಾರ್ವಜನಿಕರು ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತುಕೊಳ್ಳದೆ ಕಡ್ಡಾಯವಾಗಿ ಕ್ಷೇತ್ರಕ್ಕೆ ತೆರಳಿ ಕೆಲಸ ಮಾಡಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ನೋಟಿಸ್ ನೀಡಿ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿಶೇಷವಾಗಿ ಕೃಷಿ ಇಲಾಖೆಯ ಅಧಿಕಾರಿಗಳು ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೇವಲ ತಾಂತ್ರಿಕ ಕಾರಣಗಳನ್ನು ನೆಪವಾಗಿ ಹೇಳದೆ, ಅಗತ್ಯವಿದ್ದಲ್ಲಿ ಸ್ಥಳೀಯವಾಗಿ ಪರಿಶೀಲನೆ ನಡೆಸಿ ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕುಡಿಯುವ ನೀರಿಗೆ 1 ಕೋಟಿ ರೂ. ಅನುದಾನ :

ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರ ಪ್ರತಿಯೊಂದು ತಾಲೂಕಿಗೆ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈಗಾಗಲೇ ಅಗತ್ಯ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 4 ಕೋಟಿ ರೂ. ಬಿಡುಗಡೆಯಾಗಿದೆ. ನಗರಾಡಳಿತ ವ್ಯಾಪ್ತಿಯಲ್ಲಿ ಇನ್ನೂ ಅಗತ್ಯವಿರುವ 8 ಕೋಟಿ ರೂ. ತುರ್ತು ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಕೃಷಿ ಹಾಗೂ ನರೇಗಾ ಯೋಜನೆಗಳ ಮೂಲಕ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ಒದಗಿಸಬೇಕು. ಉದ್ಯೋಗಕ್ಕಾಗಿ ರಾಜ್ಯದ ಜನರು ನೆರೆ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಸಗೊಬ್ಬರ ಹಾಗೂ ಬೀಜಗಳ ದಾಸ್ತಾನು ಸಮರ್ಪಕವಾಗಿರಬೇಕು. ಕೆಲ ಅಧಿಕಾರಿಗಳು ಖಾಸಗಿ ವ್ಯಕ್ತಿಗಳೊಂದಿಗೆ ಶಾಮೀಲಾಗಿ ಕೃತಕ ಅಭಾವ ಸೃಷ್ಟಿಸಿ, ಹೆಚ್ಚಿನ ಬೆಲೆಗೆ ಹಾಗೂ ನೆರೆ ರಾಜ್ಯಗಳಿಗೆ ಅಕ್ರಮವಾಗಿ ರಸಗೊಬ್ಬರ ಮತ್ತು ಬೀಜಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ರೈತರ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ರಾಯಚೂರು ನಗರ ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಕೊರತೆ ಕಂಡುಬಂದಲ್ಲಿ ಕೂಡಲೇ ಪರ್ಯಾಯ ವ್ಯವಸ್ಥೆ ಮೂಲಕ ನೀರು ಒದಗಿಸಬೇಕು. ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲಿನ ಸಮಸ್ಯೆಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಈ ಕುರಿತು ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

1.19 ಲಕ್ಷ ರೈತರು ಬೆಳೆ ವಿಮೆಗೆ ನೋಂದಣಿ :

ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, ತುಂಗಭದ್ರಾ ಜಲಾಶಯದಿಂದ ರಾಯಚೂರು ಜಿಲ್ಲೆಯ ರಾಯಚೂರು, ಮಾನವಿ, ಸಿಂಧನೂರು, ಮಸ್ಕಿ ಹಾಗೂ ಸಿರವಾರ ತಾಲೂಕುಗಳು ಮತ್ತು ಕೊಪ್ಪಳ ಜಿಲ್ಲೆಯ ಕುಡಿಯುವ ನೀರಿನ ಉದ್ದೇಶಕ್ಕಾಗಿ 2026ರ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪ್ರತಿದಿನ 1,500 ಕ್ಯೂಸೆಕ್ಸ್‌ನಂತೆ ಒಟ್ಟು 2 ಟಿಎಂಸಿ ನೀರನ್ನು ತುಂಗಭದ್ರಾ ಎಡದಂಡೆ ಕಾಲುವೆ ಮೂಲಕ ಹರಿಸಲಾಗಿದೆ ಎಂದು ತಿಳಿಸಿದರು.

ನಾರಾಯಣಪುರ ಜಲಾಶಯದಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಪ್ರತಿದಿನ 300 ಕ್ಯೂಸೆಕ್ಸ್‌ನಂತೆ ಒಟ್ಟು 0.26 ಟಿಎಂಸಿ ನೀರನ್ನು ಬಲದಂಡೆ ಕಾಲುವೆ ಮೂಲಕ ಹರಿಸಲಾಗುತ್ತಿದೆ ಎಂದರು.

2026–27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ 1,19,589 ರೈತರು ನೋಂದಣಿಯಾಗಿದ್ದಾರೆ. ರೈತರಲ್ಲಿ ಪರ್ಯಾಯ ಬೆಳೆಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. 2026ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಮೂರು ಮಾನವ ಜೀವಹಾನಿ ಪ್ರಕರಣಗಳು ಸಂಭವಿಸಿದ್ದು, ತಲಾ 5 ಲಕ್ಷ ರೂ. ನಂತೆ ಒಟ್ಟು 15 ಲಕ್ಷ ರೂ. ಪರಿಹಾರ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಮಾಜಿ‌ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಶಾಸಕರಾದ ಎನ್.ಎಸ್.ಭೋಸರಾಜು, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಮುಖ್ಯ ಯೋಜನಾ ನಿರ್ದೇಶಕ ಡಾ.ಟಿ.ರೋಣಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ತಹಶಿಲ್ದಾರರು, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News