ರಾಯಚೂರು: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದಿರುವ ಪರಿಶಿಷ್ಟ ಜಾತಿಯ ಅಲೆಮಾರಿ ಚನ್ನದಾಸರ್ ಸಮುದಾಯದವರಿಗೆ ಜಾತಿ ಹಾಗೂ ವಾಸಸ್ಥಳ ಪ್ರಮಾಣಪತ್ರ ನೀಡಿ ಶಾಶ್ವತ ನೆಲೆ ಕಲ್ಪಿಸುವ ಅಗತ್ಯವಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಅವಕಾಶ ವಂಚಿತ ಅಲೆಮಾರಿಗಳ ಪರವಾಗಿ ಧ್ವನಿ ಎತ್ತಿ ಸಾಮಾಜಿಕ ನ್ಯಾಯ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಸರ್ಕಾರದ ಮಟ್ಟದಲ್ಲಿ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಅಲೆಮಾರಿ ಜನಾಂಗದವರಿಗೆ ಮೂಲ ದಾಖಲೆಗಳ ಕೊರತೆಯಿಂದಾಗಿ ಸರ್ಕಾರದ ವಿವಿಧ ಸೌಲಭ್ಯಗಳು ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಾತಿ ಪ್ರಮಾಣಪತ್ರಕ್ಕೆ ಅಗತ್ಯವಿರುವ ಮೂಲ ದಾಖಲೆಗಳು ಇಲ್ಲದಿದ್ದರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅರ್ಹರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಂತೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮನುಷ್ಯನಿಗೆ ಮೂಲಭೂತ ಸೌಕರ್ಯಗಳು ಅತ್ಯವಶ್ಯಕ. ಅಲೆಮಾರಿ ಸಮುದಾಯದವರಿಗೆ ಶಾಶ್ವತ ನೆಲೆ ಇಲ್ಲದೆ, ಶಿಕ್ಷಣ ಸೇರಿದಂತೆ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಸಮುದಾಯದವರಲ್ಲಿ ಸರ್ಕಾರದ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಅರಿವು ಮೂಡಿಸಲಾಗುತ್ತಿದೆ ಎಂದರು.

ಅಲೆಮಾರಿಗಳ ಅಭಿವೃದ್ಧಿಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಅಲೆಮಾರಿ ಕೋಶ ಸ್ಥಾಪನೆಯಾಗಿದ್ದು, 2022ರಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಯಿತು. ನಿಗಮಕ್ಕೆ ಮಹಿಳೆಯೊಬ್ಬರನ್ನು ಪ್ರಥಮ ಬಾರಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅಲೆಮಾರಿ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಲು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ 51 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳಿದ್ದು, ಅವರನ್ನು ಒಗ್ಗೂಡಿಸಿ ನಿಗಮದ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ 27 ಜಿಲ್ಲೆಗಳ 207 ತಾಲ್ಲೂಕುಗಳಲ್ಲಿ ಪ್ರವಾಸ ಕೈಗೊಳ್ಳಲಾಗಿದೆ. ಅಲೆಮಾರಿಗಳಿಗೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಮೂಲ ದಾಖಲೆಗಳನ್ನು ಒದಗಿಸಲು ಈ ಹಿಂದೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಆದೇಶ ನೀಡಿದ್ದಾರೆ ಎಂದು ಹೇಳಿದರು.

ಬಹುತೇಕ ಜಿಲ್ಲೆಗಳಲ್ಲಿ ಅಲೆಮಾರಿಗಳಿಗಾಗಿ ಮೀಸಲಿಟ್ಟಿರುವ ಒಂದು ಎಕರೆ ಅಥವಾ ಅರ್ಧ ಎಕರೆ ಪ್ರದೇಶವನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡಲು ನಿಗದಿಪಡಿಸಲಾಗಿದೆ. ನಿಗಮದ ವತಿಯಿಂದ ಅಲೆಮಾರಿ ಕಾಲೋನಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ವೃತ್ತಿ ಆಧಾರಿತ ವರ್ಗಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಿಗೆ ಪ್ರವೇಶ ಪರೀಕ್ಷೆ ಇಲ್ಲದೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.10ರಷ್ಟು ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಡಳಿತದ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಪ್ರತಿನಿಧಿಗಳೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಪಿ) ಅಡಿಯಲ್ಲಿ 100 ಕೋಟಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಅಡಿಯಲ್ಲಿ 48 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಶಿಮಾನಪ್ಪ, ಪ್ರಮುಖರಾದ ರಂಗಮುನಿದಾಸ, ಶ್ರೀನಿವಾಸ, ಅನಂತಕುಮಾರ, ಶಿವಾನಂದ ಭಜಂತ್ರಿ, ರವಿಕುಮಾರ, ಮಾಲಾ ಭಜಂತ್ರಿ, ರಾಮಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor