ರಾಯಚೂರು: ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ, ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ ಧಾವಿಸುವ ರಕ್ಷಕರು. ಅಪರಾಧ ತಡೆಗಟ್ಟಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅವರ ಪರಿಶ್ರಮ ಅನನ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದ‌ ಬಳಿಯ ಹುತಾತ್ಮರ ಸ್ಮಾರಕದಲ್ಲಿ ಬುಧವಾರ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಮಾಡುವ ಪೊಲೀಸರು ದೇಶದ ಭದ್ರತೆ ಕಾಪಾಡುತ್ತಿದ್ದಾರೆ.

1959ರಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸಿಆರ್‌ಪಿಎಫ್ ಸಿಬ್ಬಂದಿಯ ಶೌರ್ಯ ಮತ್ತು ದೇಶಪ್ರೇಮ ಇಂದಿನ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದೆ. ದೇಶದ ಗಡಿರಕ್ಷಣೆಯಿಂದ ಹಿಡಿದು ಆಂತರಿಕ ಭದ್ರತೆಯವರೆಗೆ ಪೊಲೀಸ್ ಪಡೆಗಳು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು.

ರಾಯಚೂರು ಜಿಲ್ಲೆಯಲ್ಲಿ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿ ಇಸ್ಮಾಯಿಲ್ ಹಾಗೂ ರೇಣುಕಾ ಅವರ ಸೇವೆ ಮತ್ತು ಬಲಿದಾನವನ್ನೂ ಜಿಲ್ಲಾಧಿಕಾರಿ ಸ್ಮರಿಸಿದರು. ಸಾರ್ವಜನಿಕರ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಇಂತಹ ಸಿಬ್ಬಂದಿಯ ತ್ಯಾಗವು ಪೊಲೀಸ್ ಇಲಾಖೆಯ ಕರ್ತವ್ಯನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿ ಮಾತನಾಡಿ, ಪೊಲೀಸ್ ಹುತಾತ್ಮರ ದಿನಾಚರಣೆಯ ಐತಿಹಾಸಿಕ ಹಿನ್ನೆಲೆ ಹಾಗೂ ಅದರ ಮಹತ್ವವನ್ನು ವಿವರಿಸಿದರು.

ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳು, ಸಿಬ್ಬಂದಿ, ಹುತಾತ್ಮ ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದು, ವೀರಯೋಧರಿಗೆ ಗೌರವ ನಮನ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor