ನೀಟ್ ಅಕ್ರಮ ಖಂಡಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ; ಸಂಸದ ಜಿ.ಕುಮಾರ ನಾಯಕ ಭಾಗಿ
ನವದೆಹಲಿ : ರಾಷ್ಟ್ರದಾದ್ಯಂತ ನೀಟ್ (NEET) ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು, ಪಾರದರ್ಶಕತೆಯ ಕೊರತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಮೇಲಿನ ಆತಂಕದ ಹಿನ್ನೆಲೆಯಲ್ಲಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕ ಭಾಗವಹಿಸಿದರು.
ಈ ವೇಳೆ ಮಾತನಾಡಿದ ಅವರು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತಂದಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳಿಗೆ ಆಘಾತ ಉಂಟುಮಾಡಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಪರೀಕ್ಷಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ನ್ಯಾಯಸಮ್ಮತ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಖಚಿತಪಡಿಸಬೇಕು. ಅಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಯಾವುದೇ ರಾಜಕೀಯ ಅಥವಾ ಆಡಳಿತಾತ್ಮಕ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಪ್ರತಿಭೆ ಮತ್ತು ಶ್ರಮಕ್ಕೆ ನ್ಯಾಯ ದೊರೆಯುವಂತಹ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಸಂಸದ ಜಿ. ಕುಮಾರ ನಾಯಕ ಆಗ್ರಹಿಸಿದರು.