×
Ad

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಯಚೂರಿನಲ್ಲಿ ಅರೆ ಬೆತ್ತಲೆ ಪ್ರತಿಭಟನೆ

Update: 2025-08-01 17:45 IST

ರಾಯಚೂರು: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ರಾಯಚೂರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಾದಿಗ ಸಮಾಜದ ಮುಖಂಡರಿಂದ ಅರೆಬೆತ್ತಲೆಯಾಗಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಒಂದು ತಾಸಿಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ನಂತರ ಅರೆಬೆತ್ತಲೆಯಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಸುಪ್ರಿಂಕೋರ್ಟ್ ಒಳ ಮೀಸಲಾತಿ ಜಾರಿಗೆ ನಿರ್ದೇಶನ ನೀಡಿದ್ದರೂ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಒಳ ಮೀಸಲಾತಿ ಹೋರಾಟ ಸಮಿತಿ ಸಂಚಾಲಕ ಎಂ.ವಿರುಪಾಕ್ಷಿ ಮಾಧ್ಯಮಗಳೊಂದಿಗೆ ಮಾತನಾಡಿ, ಒಳ ಮೀಸಲಾತಿ ಗಾಗಿ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಕಾಲಹರಣ‌ ಮಾಡಿ ಸಮಾಜವನ್ನು ನಿರ್ಲಕ್ಷ್ಯ ವಹಿಸಿದೆ. ಮುಂದಿನ 15 ದಿನಗಳಲ್ಲಿ ಒಳಮೀಸಲಾತಿ ಜಾರಿ ಮಾಡದಿದ್ದರೆ ಮಾದಿಗ ಸಮುದಾಯದ 10 ರಿಂದ 15 ಲಕ್ಷ ಜನರು ಇಡೀ ಬೆಂಗಳೂರಿಗೆ ಮುತ್ತಿಗೆ ಹಾಕಿ ಒಂದೇ ಒಂದು ವಾಹನ ರಸ್ತೆಗಿಳಿಯದಂತೆ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.

ಹೋರಾಟದಲ್ಲಿ ಪಿ.ಯಲ್ಲಪ್ಪ, ನಾಗರಾಜ, ಶಂಶಾಲಂ ಸೇರಿದಂತೆ ಅನೇಕರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News