ರಾಯಚೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ ಬಂಧಿಸಬೇಕು ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ವಿಧಿಸಿರುವ ನಿರ್ಬಂಧಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ‘ನನ್ನ ಮತ, ನನ್ನ ಹಕ್ಕು’ ಸಂಘಟನೆಯ ಕಾರ್ಯಕರ್ತರು ನಗರದ ಟಿಪ್ಪು ಸುಲ್ತಾನ್ ಉದ್ಯಾನದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್ ಕಿ ಬಾತ್’ ರೇಡಿಯೊ ಕಾರ್ಯಕ್ರಮದ ಮೂಲಕ ಪ್ರಚಾರಕ್ಕೆ ಆದ್ಯತೆ ನೀಡುತ್ತಿದ್ದಾರೆಯೇ ಹೊರತು, ದೇಶದ ಯುವಜನರು ಹಾಗೂ ಮತದಾರರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮತದಾನದ ಹಕ್ಕಿನ ರಕ್ಷಣೆಗಾಗಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸಲು ನಿರ್ಬಂಧ ಹೇರುವ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಈ ಸಂದರ್ಭದಲ್ಲಿ ರೇಡಿಯೊವನ್ನು ಒಡೆದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿಯವರು ನಾಮನಿರ್ದೇಶನ ಮಾಡುವ ಸಚಿವರ ಬದಲಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಹಾಗೂ ವಿರೋಧ ಪಕ್ಷದ ನಾಯಕರಿಗೆ ಸ್ಥಾನ ಕಲ್ಪಿಸುವಂತೆ ಸಂಬಂಧಿತ ಕಾನೂನಿಗೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ‘ನನ್ನ ಮತ, ನನ್ನ ಹಕ್ಕು’ ಸಂಘಟನೆಯ ಸಂಚಾಲಕ ಅಜೀಜ್ ಜಾಗೀರ್ದಾರ್, ಮುಖಂಡರಾದ ಭೀಮಯ್ಯ, ಖಾದರ್, ನಿಸಾರ್ ಅಹ್ಮದ್, ಜಗದೀಶ್, ಹನೀಫ್ ಅಬಕಾರಿ, ಸಣ್ಣ ನರಸಪ್ಪ, ಮಾರಣ್ಣ ಹಾಗೂ ಸೈಯದ್ ಮೂವೀಸ್ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor