ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಿ, ಸಾವಿನ ಪ್ರಮಾಣ ನಿಯಂತ್ರಣ: ಸಚಿವ ದಿನೇಶ್ ಗುಂಡುರಾವ್
ರಾಯಚೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ನಮ್ಮ ಧ್ಯೆಯವಾಗಿದೆ. ಬಾಣಂತಿಯರ ಸಾವು ನಿಯಂತ್ರಣಕ್ಕೆ ಅಭಿಯಾನ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅವರಿಂದು ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಪ್ರಸ್ತುತ ಬಾಣಂತಿಯರ ಸಾವಿನ ಪ್ರಮಾಣ 1ಲಕ್ಷಕ್ಕೆ 60 ಇದೆ. ಈ ಪ್ರಮಾಣವನ್ನು ಕಡಿಮೆ ಮಾಡಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಿದೆ ಎಂದರು.
ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ವತಿಯಿಂದ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ಮುಖ್ಯ ವೈದ್ಯಾಧಿಕಾರಿ, ತಜ್ಞರು ಹಾಗೂ ಶುಶ್ರೂಷಕ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೆಶನ ನೀಡಲಾಗಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಂಜೂರು, ಅಭಿವೃದ್ಧಿ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ರೂ.900ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದರು.
ಬಳಿಕ ಸ್ಥಳೀಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗ, ಶಸ್ತ್ರಚಿಕಿತ್ಸೆ ವಿಭಾಗಕ್ಕೆ ಭೇಟಿ ನೀಡಿ ವೈದ್ಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಮಾನ್ವಿ ಶಾಸಕ ಜಿ.ಹಂಪಯ್ಯ ನಾಯಕ ಸಹುಕಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಎಸ್ ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಗೌಡ ಮುಷ್ಟೂರು, ಮುಖ್ಯ ವೈದ್ಯಾಧಿಕಾರಿ ಡಾ.ಡಿ.ಶರಣಪ್ಪ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.