Raichur | ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗೆ 3 ವರ್ಷ ಜೈಲು
ನಕಲಿ ದಾಖಲೆಗಳಿಂದ ಪಾಸ್‌ಪೋರ್ಟ್ ಪಡೆದ ಆರೋಪ ಸಾಬೀತು
ಸಾಂದರ್ಭಿಕ ಚಿತ್ರ (AI)
ಸಿಂಧನೂರು : ಅಕ್ರಮವಾಗಿ ಭಾರತ ಪ್ರವೇಶಿಸಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಗೆ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
ಆರೋಪಿ ಶೋರನಜೀತ್ ಮಂಡಲ್ ಸುಮಾರು 10–12 ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಸಿಂಧನೂರು ತಾಲೂಕಿನ ಆರ್.ಎಚ್. ನಂ.3 ಕ್ಯಾಂಪ್‌ನಲ್ಲಿ ನೆಲೆಸಿದ್ದ. ಬಳಿಕ ಚುನಾವಣಾ ಗುರುತಿನ ಚೀಟಿ, ಆಧಾರ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ವಿವಿಧ ದಾಖಲೆಗಳನ್ನು ಪಡೆದು, ಅವುಗಳ ಆಧಾರದ ಮೇಲೆ 2018ರಲ್ಲಿ ಭಾರತೀಯ ಪಾಸ್‌ಪೋರ್ಟ್ ಪಡೆದಿದ್ದ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಬಾಂಗ್ಲಾದೇಶಕ್ಕೆ ತೆರಳುವ ವೇಳೆ ಚೀಫ್ ಇಮಿಗ್ರೇಷನ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಆತ ಭಾರತೀಯ ಪ್ರಜೆ ಅಲ್ಲ ಎಂಬುದು ಪತ್ತೆಯಾಗಿ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಲಾಗಿತ್ತು. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ತನಿಖಾಧಿಕಾರಿಗಳಾದ ಸಿದ್ದರಾಮೇಶ್ವರ ಗಡೇದ್ ಹಾಗೂ ರಾಘವೇಂದ್ರ ತನಿಖೆ ನಡೆಸಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ರೂಪಾ ಸಿ. ವಗ್ಗಾ, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದ್ದಾರೆ. ಶಿಕ್ಷೆ ಪೂರ್ಣಗೊಂಡ ಬಳಿಕ ಆರೋಪಿಯನ್ನು ಬಾಂಗ್ಲಾದೇಶಕ್ಕೆ ಹಿಂತಿರುಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ನಿರ್ದೇಶಿಸಿದೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ರಾಗಲ ಪರ್ವಿ ಹನುಮೇಶ್ ವಾದ ಮಂಡಿಸಿದರು. ಪೊಲೀಸ್ ಸಿಬ್ಬಂದಿ ರಾಘವೇಂದ್ರ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.