×
Ad

Raichur | ‘ಸಂಕಲ್ಪ ಸಮಾಗಮ’ಕ್ಕೆ ಏಮ್ಸ್ ಹೋರಾಟ ಸಮಿತಿಯ ಬೆಂಬಲ

Update: 2026-07-10 19:55 IST

ರಾಯಚೂರು : ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿರುವ ‘ಸಂಕಲ್ಪ ಸಮಾಗಮ’ ಕಾರ್ಯಕ್ರಮಕ್ಕೆ ಏಮ್ಸ್ ಹೋರಾಟ ಸಮಿತಿಯು ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಮಿತಿಯ ಅಧ್ಯಕ್ಷ ಬಸವರಾಜ ಕಳಸ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ್ಮದಿನವನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಸಂಕಲ್ಪದ ವೇದಿಕೆಯಾಗಿ ರೂಪಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಹೇಳಿದರು.

ನವಲಿ ಹಾಗೂ ತಿಂಥಣಿ ಜಲಾಶಯ ಸೇರಿದಂತೆ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರದ ಗಮನ ಸೆಳೆಯುವುದು ಹಾಗೂ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರವನ್ನು ಪಕ್ಷಾತೀತವಾಗಿ ಒತ್ತಾಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗಾಗಿ ಹಲವು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದು, ಸಂಕಲ್ಪ ಸಮಾಗಮದ ಮೂಲಕ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಸಂಘ–ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಧ್ವನಿಯೆತ್ತಬೇಕು ಎಂದು ಬಸವರಾಜ ಕಳಸ ಮನವಿ ಮಾಡಿದರು.

ಮುಂಬರುವ ಬಜೆಟ್‌ನಲ್ಲಿ ನವಲಿ ಹಾಗೂ ತಿಂಥಣಿ ಜಲಾಶಯ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು. ಜೊತೆಗೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ಕೇಂದ್ರ ಸರ್ಕಾರ ಶೀಘ್ರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಮಠಾಧೀಶರ ನಿಯೋಗವನ್ನು ಪ್ರಧಾನಮಂತ್ರಿಯನ್ನು ಭೇಟಿ ಮಾಡಲು ಕರೆದೊಯ್ದು, ರಾಯಚೂರಿಗೆ ಏಮ್ಸ್ ಮಂಜೂರಾತಿಗಾಗಿ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ತರಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಜನರ ಬಹುಕಾಲದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಏಮ್ಸ್ ಹೋರಾಟ ಸಮಿತಿಯು ಸಂಕಲ್ಪ ಸಮಾಗಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿದೆ ಎಂದು ಬಸವರಾಜ ಕಳಸ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್. ಮಾರೆಪ್ಪ, ಸಾದಿಕ್, ಅಶೋಕ್ ಜೈನ್, ಸಂತೋಷ್ ಕುಮಾರ್ ಹಾಗೂ ಜಗದೀಶ್ ಪುರತಿಪ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News