Raichur | ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಅಂಬೇಡ್ಕರ್ ಸೇನೆಯಿಂದ ಅಣಕು ಶವಯಾತ್ರೆ

Update: 2026-07-23 21:08 IST

ರಾಯಚೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ಸಾಮಾಜಿಕ ಹೋರಾಟಗಾರ ಸೋನಮ್ ವಾಂಗಚುಕ್ ಅವರ ಉಪವಾಸ ಸತ್ಯಾಗ್ರಹ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಅಂಬೇಡ್ಕರ್ ಸೇನೆ (ರಿ.) ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು, ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಅಧ್ಯಕ್ಷ ವಿಶ್ವನಾಥ ಪಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ತಮ್ಮಣ್ಣ ವಕೀಲರು, ಬಂದೇನವಾಜ್, ರಾಮಕೃಷ್ಣ, ಅಮರಯ್ಯಸ್ವಾಮಿ, ಚಂದ್ರು ಯಕ್ಲಾಸನೂರು, ಮರೆಪ್ಪ, ಜಂಬಣ್ಣ, ಸುರೇಶ್ ಪಟ್ಟಿ, ರಾಜು, ಪರಶುರಾಮ್, ಪುಷ್ಪ, ರಾಜಕುಮಾರಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News