Raichur | ಅಭಿವೃದ್ಧಿ ಕಾಮಗಾರಿಗೆ ಅಂಬೇಡ್ಕರ್ ಪುತ್ಥಳಿ ತಾತ್ಕಾಲಿಕ ತೆರವು
ಕಾಮಗಾರಿ ಪೂರ್ಣಗೊಂಡ ಬಳಿಕ ಮರು ಪ್ರತಿಷ್ಠಾಪನೆ; ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸುರಕ್ಷಿತ ಸ್ಥಳಾಂತರ
ರಾಯಚೂರು, ಜು.1: ನಗರದ ಹೃದಯ ಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಅಂಬೇಡ್ಕರ್ ಪುತ್ಥಳಿಯನ್ನು ನವೀಕರಣ ಹಾಗೂ ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ ಬುಧವಾರ ತಾತ್ಕಾಲಿಕವಾಗಿ ತೆರವುಗೊಳಿಸಲಾಯಿತು.
ಅಂಬೇಡ್ಕರ್ ವೃತ್ತವನ್ನು ಆಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪುತ್ಥಳಿಯ ನವೀಕರಣದೊಂದಿಗೆ ವೃತ್ತದ ಸೌಂದರ್ಯೀಕರಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಯೋಜನೆಯನ್ನು ಜಿಲ್ಲಾಡಳಿತ ರೂಪಿಸಿದೆ.
ಪ್ರಸ್ತುತ ಪುತ್ಥಳಿಯನ್ನು ಸುರಕ್ಷಿತವಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸ್ಥಳಾಂತರಿಸಲಾಗಿದ್ದು, ಕಾಮಗಾರಿಗಳು ಪೂರ್ಣಗೊಂಡ ಬಳಿಕ ಗೌರವಯುತವಾಗಿ ಅದೇ ಸ್ಥಳದಲ್ಲಿ ಮರು ಪ್ರತಿಷ್ಠಾಪಿಸಲಾಗುವುದು ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಪುತ್ಥಳಿ ಸ್ಥಳಾಂತರದ ವೇಳೆ ವಿವಿಧ ದಲಿತ, ಸಾಮಾಜಿಕ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದು, ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷುಗಿರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.