ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ರಾಜ್ಯ ಕಾಂಗ್ರೆಸ್ ಮುಖಂಡ ರವಿ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿ, ಪ್ರಕ್ರಿಯೆಯ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಗೆ ದೇಶದ ವಿವಿಧ ವಿರೋಧ ಪಕ್ಷಗಳು ಮತ್ತು ನಾಗರಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಹೇಳಿ, ಚುನಾವಣಾ ಆಯೋಗದ ನಿರ್ಧಾರಗಳಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪಾತ್ರದ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ.

ಚುನಾವಣಾ ಆಯೋಗದ ಮೂವರು ಆಯುಕ್ತರಲ್ಲಿ ಇಬ್ಬರು ಆಯುಕ್ತರು ಕಳೆದ ಕೆಲ ತಿಂಗಳುಗಳಲ್ಲಿ ಆಯೋಗದ ಕೆಲವು ನಿರ್ಧಾರಗಳು ಮತ್ತು ಕ್ರಮಗಳ ಕುರಿತು ಲಿಖಿತ ಆಕ್ಷೇಪಗಳನ್ನು ದಾಖಲಿಸಿದ್ದಾರೆ ಎಂದು ಅವರು ಆರೋಪಿಸಿದರು.

ಎಸ್‌ಐಆರ್ ಪ್ರಕ್ರಿಯೆಯಿಂದ ಅನೇಕ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಹೊರಗುಳಿದಿವೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆಯೇ ಎಂಬುದರ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ರವಿ ಪಾಟೀಲ್ ಒತ್ತಾಯಿಸಿದರು.

ಚುನಾವಣಾ ಆಯೋಗವು ಸರ್ವಸಮ್ಮತಿಯ ತತ್ವದ ಆಧಾರದಲ್ಲಿ ಕಾರ್ಯನಿರ್ವಹಿಸಬೇಕು. ಆಯೋಗದ ಕಾರ್ಯವೈಖರಿ ಪಾರದರ್ಶಕವಾಗಿರಬೇಕು ಹಾಗೂ ಮತದಾರರ ಸಾಂವಿಧಾನಿಕ ಹಕ್ಕುಗಳಿಗೆ ಯಾವುದೇ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಮತದಾರರ ಹಕ್ಕುಗಳ ರಕ್ಷಣೆಗೆ ಎಲ್ಲರೂ ಧ್ವನಿ ಎತ್ತಬೇಕು. ಎಸ್‌ಐಆರ್ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕೇಳಿಬಂದಿರುವ ಆರೋಪಗಳ ಬಗ್ಗೆ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರವಿ ಪಾಟೀಲ್ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor