ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯ ಕೊನೆಯ ಭಾಗಕ್ಕೆ ನೀರು ತಲುಪದೆ ಬೆಳೆಗಳಿಗೆ ನೀರಿನ ಸಮಸ್ಯೆ ಎದುರಾಗಿದ್ದು, ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಗ್ರಾಮಗಳ ಜನರು ಮತ್ತು ಜಾನುವಾರುಗಳಿಗೆ ನೀರು ಒದಗಿಸಲು ಪೋತ್ನಾಳ ಹಳ್ಳಕ್ಕೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಗಿ ಒತ್ತಾಯಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ತುಂಗಭದ್ರಾ ಎಡದಂಡೆ ಕಾಲುವೆಯ ಮುಖ್ಯ ಕಾಲುವೆಯ ನೀರು ಸ್ಥಗಿತಗೊಳಿಸಿದೆ. ಆದರೆ, ಉಪಕಾಲುವೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ನೀರಾವರಿಯನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಉಪಕಾಲುವೆಗಳ ವ್ಯಾಪ್ತಿಗೆ ನೀರು ತಲುಪದ ಕಾರಣ ಬಿತ್ತನೆ ಮಾಡಿರುವ ಜೋಳದ ಬೆಳೆ ಒಣಗುವ ಸ್ಥಿತಿ ಎದುರಾಗಿದೆ. ಕಾಲುವೆಯ ಕೊನೆಯ ಭಾಗಕ್ಕೆ ನೀರು ತಲುಪಿಲ್ಲ. ಒಟ್ಟು 1,000 ಕ್ಯೂಸೆಕ್ ನೀರಿನಲ್ಲಿ 800 ಕ್ಯೂಸೆಕ್ ನೀರು ಅಕ್ರಮವಾಗಿ ಬಳಕೆಯಾಗುವಂತಾಗಿದೆ ಎಂದು ದೂರಿದರು.

ಜಿಲ್ಲಾಡಳಿತ ಕೂಡಲೇ ಪೋತ್ನಾಳ ಹಳ್ಳಕ್ಕೆ ನೀರು ಹರಿಸುವ ಮೂಲಕ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. 30ಕ್ಕೂ ಹೆಚ್ಚು ಗ್ರಾಮಗಳ ಜನರು ಕುಡಿಯುವ ನೀರಿಗಾಗಿ ಈ ಹಳ್ಳವನ್ನೇ ಅವಲಂಬಿಸಿದ್ದಾರೆ. ಆದರೆ, ಹಳ್ಳದಲ್ಲಿ ನೀರಿಲ್ಲದ ಕಾರಣ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿರುವ ಸಂದರ್ಭದಲ್ಲಿ ಬ್ಯಾಂಕ್‌ಗಳು ನ್ಯಾಯಾಲಯಗಳ ಮೂಲಕ ರೈತರಿಗೆ ನೋಟಿಸ್‌ಗಳನ್ನು ನೀಡುತ್ತಿವೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. ಬ್ಯಾಂಕ್‌ಗಳಿಗೆ ಸರ್ಕಾರದಿಂದ ಯಾವುದೇ ಸೂಚನೆ ಅಥವಾ ಆದೇಶ ಬಂದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ತಿಳಿಸಿದರು.

ಕೋಟ್ನೆಕಲ್ ಗ್ರಾಮದ ರೈತ ಹುಸೇನಪ್ಪ ಅವರಿಂದ ಸಾಲ ವಸೂಲಿ ಮಾಡಲು ಬ್ಯಾಂಕ್ ಅಧಿಕಾರಿಗಳು ನೋಟಿಸ್ ನೀಡಿ ಮುಂದಾಗಿದ್ದಾರೆ. ಒಂದು ಕಡೆ ಒತ್ತಾಯಪೂರ್ವಕ ಸಾಲ ವಸೂಲಿ ಮಾಡದಂತೆ ಸೂಚನೆ ನೀಡಿರುವುದಾಗಿ ಸರ್ಕಾರ ಹೇಳುತ್ತಿದ್ದರೆ, ಮತ್ತೊಂದೆಡೆ ಬ್ಯಾಂಕ್ ಅಧಿಕಾರಿಗಳು ಕನಿಷ್ಠ ಮಾನವೀಯತೆಯನ್ನೂ ತೋರದೆ ರೈತರೊಂದಿಗೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬೆಳೆಯಿಲ್ಲದೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಸಾಲದ ಮರುಪಾವತಿ ಅವಧಿಯನ್ನು ವಿಸ್ತರಿಸುವುದಾಗಿ ಸರ್ಕಾರ ಹೇಳುತ್ತಿದ್ದರೂ, ರೈತರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲಾಗುತ್ತಿದೆ. ಇಂತಹ ಕ್ರಮಗಳನ್ನು ಕೂಡಲೇ ತಡೆಯಬೇಕು. ಇಲ್ಲದಿದ್ದರೆ ರೈತ ಸಂಘದ ವತಿಯಿಂದ ವಿವಿಧ ಹಂತಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ದುರುಗಪ್ಪ, ನಾಗನಗೌಡ, ಬಸವಲಿಂಗ ಪಾಶ್ವನಾರ್ಥಗೌಡ, ಸಂತೋಷ ಹೀರೆಮಠ ಹಾಗೂ ರಾಜುಗೌಡ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor