Raichur | ದೇವದುರ್ಗದಲ್ಲಿ ‘ಬಾಲವಿಕಾಸ ನಡಿಗೆ ಪಾಲಕರ ಕಡೆಗೆ’ ತರಬೇತಿ ಕಾರ್ಯಕ್ರಮ
ಮಕ್ಕಳ ಹಕ್ಕು, ಬಾಲ್ಯ ವಿವಾಹ ತಡೆ ಕುರಿತು ಅರಿವು
ರಾಯಚೂರು, ಜು.16: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ದೇವದುರ್ಗ ಶಿಶು ಅಭಿವೃದ್ಧಿ ಯೋಜನೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ‘ಬಾಲವಿಕಾಸ ನಡಿಗೆ ಪಾಲಕರ ಕಡೆಗೆ’ ಒಂದು ದಿನದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶರಣಮ್ಮ, ಸಂಪನ್ಮೂಲ ವ್ಯಕ್ತಿಗಳಾದ ಭರತ್ ಕುಮಾರ್ ಹಾಗೂ ಚಂದನಕರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಯೋಜನಾ ಸಂಯೋಜಕ ಮೋಹನ್ ಕುಮಾರ್, ಡಾನ್ ಬೋಸ್ಕೋ ಪೋಷಕತ್ವ ಯೋಜನೆ ಸಂಯೋಜಕ ನಾಗರಾಜ, ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕಿ ದೀಪಾ ಸೇರಿದಂತೆ ವಿವಿಧ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್, ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳು ಹಾಗೂ ಬಾಲ್ಯ ವಿವಾಹ ತಡೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಶಶಿರೇಖಾ ನಿರೂಪಿಸಿ, ವಂದಿಸಿದರು.