ರಾಯಚೂರು: ಹಾಲು, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಲಾಗಿದೆ ಎಂದು ಆರೋಪಿಸಿ, ಶಾಸಕ ಡಾ. ಶಿವರಾಜ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಸಾರ್ವಜನಿಕರಿಂದ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿ ದಿವಾಳಿಯಾಗಿದೆ. ಹೀಗಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಮೇಲೆ ಬರೆ ಎಳೆಯುತ್ತಿದೆ. ಸರ್ಕಾರಕ್ಕೆ ನಾವೇ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ನೀಡುತ್ತೇವೆ ಎಂದು ಶಾಸಕ ಡಾ. ಶಿವರಾಜ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಬೆಲೆ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬರದಿಂದ ನಷ್ಟ ಅನುಭವಿಸಿದ ರೈತರಿಗೆ ಸಮರ್ಪಕ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ಜನಸಾಮಾನ್ಯರ ಬದುಕಿಗೆ ಅಗತ್ಯವಾಗಿರುವ ಹಾಲು, ಬಸ್ ಪ್ರಯಾಣ ದರ ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬದಲು ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆ ಮಾಡುತ್ತಿದೆ. ಹಾಲಿನ ದರ, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ಸೇವೆಗಳ ವೆಚ್ಚ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕಿನ ಮೇಲೆ ಹೊರೆ ಹೇರುತ್ತಿದೆ. ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಬಡವರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪದೇಪದೇ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಈಗಾಗಲೇ ದಿನನಿತ್ಯದ ಜೀವನ ನಿರ್ವಹಣೆಗೆ ಪರದಾಡುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಲಾಗುತ್ತಿದೆ. ಸರ್ಕಾರದ ಇಂತಹ ನಿರ್ಧಾರಗಳಿಂದ ಜನಸಾಮಾನ್ಯರ ಜೀವನ ದುಸ್ತರವಾಗುತ್ತಿದೆ ಎಂದು ದೂರಿದರು.

ಜನರ ಹಿತ ಕಾಪಾಡಬೇಕಾದ ಸರ್ಕಾರವೇ ಅವರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುವುದು ಸರಿಯಲ್ಲ. ರೈತರಿಗೆ ಬರ ಪರಿಹಾರ ನೀಡುವುದು, ಬೆಲೆ ಏರಿಕೆಯನ್ನು ನಿಯಂತ್ರಿಸುವುದು ಹಾಗೂ ಜನಸಾಮಾನ್ಯರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಬೇಕು. ಆದರೆ ಕಾಂಗ್ರೆಸ್ ಸರ್ಕಾರ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಹಾಲು, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಜನಸಾಮಾನ್ಯರ ಹಿತದೃಷ್ಟಿಯಿಂದ ಆಡಳಿತ ನಡೆಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗಿರೀಶ್ ಕನಕವೀಡು, ಶಂಕರರೆಡ್ಡಿ, ಸಂತೋಷ ರಾಜಗುರು, ನರಸರೆಡ್ಡಿ, ಪೂಗುಲು ಶ್ರೀನಿವಾಸ, ಕಡಗೋಲ್ ಆಂಜನೇಯ ಸೇರಿದಂತೆ ಜಿಲ್ಲಾ ಹಾಗೂ ನಗರ ಘಟಕದ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor