×
Ad

ರಾಯಚೂರು : ನಿಂತಿದ್ದ ಲಾರಿಗೆ ಕಾರು ಢಿಕ್ಕಿ; ಇಬ್ಬರು ಮೃತ್ಯು, ಹಲವರಿಗೆ ಗಾಯ

Update: 2026-06-05 09:38 IST

ಮಾನ್ವಿ, ಜೂ.5: ರಾಯಚೂರು-ಸಿಂಧನೂರು ಮುಖ್ಯರಸ್ತೆಯ ಸೂರ್ಯ ಫಂಕ್ಷನ್ ಹಾಲ್ ಸಮೀಪ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನುಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ರಾಘವೇಂದ್ರ (26) ಹಾಗೂ ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ.  ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ರಾಘವೇಂದ್ರ ಹಾಗೂ ಮುಂದಿನ ಆಸನದಲ್ಲಿ ಕುಳಿತಿದ್ದ ಪ್ರಿಯಾಂಕಾ ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಒಂದೇ ಕುಟುಂಬದ ಸದಸ್ಯರು ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ದರ್ಶನ ಪಡೆದು ಕಾರಿನಲ್ಲಿ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಕಾಳಮ್ಮ ಹಾಗೂ ಕವಿತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸೌಮ್ಯ (14), ಮಧು (9) ಮತ್ತು ವಿಜಯ್ (3) ಎಂಬ ಮಕ್ಕಳಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಮಾನ್ವಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾನ್ವಿ ಪೊಲೀಸ್ ಠಾಣೆಯ ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು.

ಈ ಕುರಿತು ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News