Raichur | ಗ್ರಾಮ ಪಂಚಾಯತ್‌ಗಳಲ್ಲಿ ಭಾರತ್ ಜೋಡೋ ಯುವ ಸಂಘ ರಚನೆಗೆ ಸಿಇಒ ಈಶ್ವರ್ ಕಾಂದೂ ಸೂಚನೆ

ಮಾಸಿಕ ಪ್ರಗತಿ ಪರಿಶೀಲನಾ ಸಭೆ

Update: 2026-08-14 18:27 IST

ರಾಯಚೂರು : ಗ್ರಾಮೀಣ ಪ್ರದೇಶದಲ್ಲಿ ಸಶಕ್ತ ಯುವಕರನ್ನು ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಆದ್ಯತೆ ನೀಡಬೇಕು ಎಂದು ರಾಯಚೂರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಯುವಕರನ್ನು ಸಂಘಟಿಸುವ ಹಾಗೂ ಸರ್ಕಾರಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ 10 ಲಕ್ಷ ರೂ. ಮಂಜೂರಾಗಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸಂಘ ರಚನೆ ಕುರಿತು ವ್ಯಾಪಕ ಪ್ರಚಾರ ಕೈಗೊಂಡು, ಯುವಕ-ಯುವತಿಯರನ್ನು ಸಂಘಟಿಸಬೇಕು ಎಂದು ಸೂಚಿಸಿದರು.

ಪ್ರತಿ ತಿಂಗಳು ಕನಿಷ್ಠ ಒಂದು ಬಾರಿ ಯುವ ಸಂಘದ ಪದಾಧಿಕಾರಿಗಳ ಸಭೆ ನಡೆಸಿ ಶ್ರಮದಾನ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ 1,452 ಸಂಘಗಳನ್ನು ರಚಿಸಲಾಗಿದ್ದು, ಆ.25ರೊಳಗೆ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಘಗಳನ್ನು ರಚಿಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ನೇಮಿಸಬೇಕು ಎಂದರು.

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಕೂಲಿಕಾರರಿಗೆ ನಿರಂತರ ಕೆಲಸ ಒದಗಿಸುವಂತೆ ಹಾಗೂ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಗೆ ಹೆಚ್ಚಿನ ಗಮನಹರಿಸಬೇಕು. ಸಿಬ್ಬಂದಿಯನ್ನು ಒಳಗೊಂಡ ತಂಡ ರಚಿಸಿ ತೆರಿಗೆ ವಸೂಲಿ ಹೆಚ್ಚಿಸಬೇಕು. ಜೆಸ್ಕಾಂಗೆ ಬಾಕಿ ಇರುವ ವಿದ್ಯುತ್ ಬಿಲ್‌ಗಳನ್ನು ಪಾವತಿಸಬೇಕು ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಪ್ರಶಸ್ತಿ ಪ್ರದಾನ :

ದೇವದುರ್ಗ ತಾಲೂಕಿನ ಸೋಮನಮರಡಿ ಗ್ರಾಪಂ ಪಿಡಿಒ ಲಕ್ಷ್ಮೀ ಅಷ್ಟಗಿ ಹಾಗೂ ರಾಯಚೂರು ತಾಲೂಕಿನ ಸಗಮಕುಂಟಾ ಗ್ರಾಪಂ ಪಿಡಿಒ ಕರಿಯಪ್ಪ ಅವರಿಗೆ ಕ್ರಮವಾಗಿ ಜುಲೈ ಮತ್ತು ಆಗಸ್ಟ್ ತಿಂಗಳ ಉತ್ತಮ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ವೇಳೆ ಜಿಪಂ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜೇರಿ, ಯೋಜನಾ ನಿರ್ದೇಶಕರಾದ ಶರಣಬಸವರಾಜ್, ಮುಖ್ಯ ಲೆಕ್ಕಧಿಕಾರಿಗಳಾದ ವಿಜಯಶಂಕರ್, ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಟಿ.ರೋಣಿ, ರಾಜೀವ್ ಗಾಂಧೀ ವಸತಿ ನಿಗಮದ ಸಹಾಯಕ ಪ್ರದಾನ ವ್ಯವಸ್ಥಾಪಕರಾದ ಉಸ್ಮಾನ್ ಪಾಷಾ, ಜೆಸ್ಕಾಂ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ಡಿ. ಮೋಹನ್, ವಿವಿಧ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News