×
Ad

ರಾಯಚೂರು | ಕಾಣೆಯಾದ ಮಹಿಳೆ-ಮಕ್ಕಳ ಪ್ರಕರಣಗಳ ಕುರಿತು ಸಮಾಲೋಚನಾ ಸಭೆ

Update: 2025-09-25 21:31 IST

ರಾಯಚೂರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ ಅವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಗುರುವಾರದಂದು ಕಾಣೆಯಾದ ಮಹಿಳೆ-ಮಕ್ಕಳ ಪ್ರಕರಣಗಳ ಕುರಿತು ಸಮಾಲೋಚನಾ ಸಭೆ ನಡೆಯಿತು.

ಈ ಸಭೆಯಲ್ಲಿ ಮಾನ್ಯ ನ್ಯಾಯಾಧೀಶರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಂಭವಿಸಿದ ಮಹಿಳೆಯರು ಮತ್ತು ಮಕ್ಕಳು ಕಾಣೆಯಾಗಿರುವ ಪ್ರಕರಣಗಳು ಹಾಗೂ ಅಪಹರಣ ಪ್ರಕರಣಗಳ ತನಿಖಾ ಪ್ರಗತಿ ಕುರಿತು ಸಮಗ್ರ ಚರ್ಚೆ ನಡೆಯಿತು.

ತನಿಖಾ ಪ್ರಕ್ರಿಯೆಯಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಅಧಿಕಾರಿಗಳು ವಿವರಿಸಿದರೆ, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕಾನೂನು ಬದ್ಧ ಸಲಹೆಗಳನ್ನು ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತನಿಖೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಪೀಡಿತರಿಗೆ ನ್ಯಾಯ ಒದಗಿಸಬೇಕು ಎಂದು ತನಿಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಮಾಜದ ಎಲ್ಲಾ ಹಂತಗಳಿಂದ ಸಹಕಾರ ದೊರಕಿದರೆ ಪ್ರಕರಣಗಳ ನಿಖರ ತನಿಖೆ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಪೊಲೀಸ್ ಇಲಾಖೆಯ ಪ್ರಮುಖ ಅಧಿಕಾರಿಗಳು ಹಾಜರಿದ್ದು, ಮುಂದಿನ ದಿನಗಳಲ್ಲಿ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲು ನಿರ್ಧಾರ ಕೈಗೊಳ್ಳಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News