Raichur | ಎಸ್‌ಐಆರ್ ಯಶಸ್ಸಿಗೆ ಗ್ರಾಮ ಪಂಚಾಯತ್ ಸಿಬ್ಬಂದಿ ಸಹಕಾರ ಅಗತ್ಯ: ರಾಘವೇಂದ್ರ ಕೆ.
ಎಸ್‌ಐಆರ್ ಜಾಗೃತಿ ಕಾರ್ಯಕ್ರಮ
ರಾಯಚೂರು, ಜು.17: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕಿನಿಂದ ಸಾಗುತ್ತಿದ್ದು, ಗ್ರಾಮ ಪಂಚಾಯಿತಿ ಸಿಬ್ಬಂದಿ ಬಿಎಲ್‌ಒಗಳೊಂದಿಗೆ ಸಮನ್ವಯ ಸಾಧಿಸಿ ಅರ್ಹ ಮತದಾರರ ಹೆಸರು ಸೇರ್ಪಡೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ರಾಘವೇಂದ್ರ ಕೆ. ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಕರವಸೂಲಿಗಾರರಿಗೆ ಆಯೋಜಿಸಿದ್ದ ಎಸ್‌ಐಆರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯ ಶೇ.90ರಷ್ಟು ಪೂರ್ಣಗೊಂಡಿದ್ದು, ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ನಮೂನೆಗಳನ್ನು ವಿತರಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೂ.30ರಿಂದ ಆ.8ರವರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ಅರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ಕುಟುಂಬದ ಎಲ್ಲ ಅರ್ಹ ಸದಸ್ಯರ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಆಗ ಮಾತ್ರ ಮತದಾನದ ದಿನ ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸ್ವೀಪ್ ಸಮಿತಿಯ ಜಿಲ್ಲಾ ಮಾಸ್ಟರ್ ಟ್ರೈನರ್ ಡಾ. ದಂಡಪ್ಪ ಬಿರಾದಾರ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಸೇರಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಕಾರ್ಯಾಲಯದ ವ್ಯವಸ್ಥಾಪಕ ವೀರೇಶ ಆರ್.ಪಿ., ಜಿಲ್ಲಾ ಪಂಚಾಯತಿಯ ಲೆಕ್ಕ ಶಾಖೆಯ ಲೆಕ್ಕಾಧೀಕ್ಷಕರಾದ ಅಬ್ದುಲ್ ರೌಫ್, ರವೀಂದ್ರ ಭೋಸ್ಲೆ, ಸಲೀಂ ಮಲಿಕ್ ಸೇರಿದಂತೆ ಇತರರು ಇದ್ದರು.