×
Ad

ರಾಯಚೂರು | ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ಕೈಬಿಡಿಲು ಸಿಪಿಐ(ಎಂ) ಆಗ್ರಹ

Update: 2025-02-27 18:03 IST

ರಾಯಚೂರು : ರಾಜ್ಯದಲ್ಲಿ ಕೊಪ್ಪಳ, ಹಾಸನ, ಹಾವೇರಿ ಮಂಡ್ಯ, ಚಾಮರಾಜನಗರ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸವಾದಿ) ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ ಒತ್ತಾಯಿಸಿದ್ದಾರೆ.

ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, 9 ವಿವಿಗಳನ್ನು ಮುಚ್ಚುವ ಸರ್ಕಾರದ ಈ ಅವೈಜ್ಞಾನಿಕ ನಡೆಯು ಅಕ್ಷಮ್ಯ ಅಪರಾಧವಾಗಿದ್ದು, 9 ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಬೋಧಕರು ಹಾಗೂ ಇತರೆ ಸಿಬ್ಬಂದಿಗಳ ಹೊಣೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮಾನವಾಗಿ ಹೊತ್ತುಕೊಳ್ಳಬೇಕು ಎಂದು ಕಿಡಿಕಾರಿದರು.

ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಜಮೀನಿನ ವೆಚ್ಚ ಬಿಟ್ಟು (100ರಿಂದ 200 ಎಕರೆ ಅಗತ್ಯ) 342 ಕೋಟಿ ರೂ. ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ, ಮೂಲ ಸೌಕರ್ಯ, ಸಲಕರಣೆಗಳು, ವಾಹನಗಳು, ಪೀಠೋಪಕರಣ ಮತ್ತು ಇತರೆ ವಸ್ತುಗಳ ಖರೀದಿಸಲು ಅಗತ್ಯವಿರುವ ಹಣಕಾಸಿನ ನೆರವನ್ನು ಮಾರ್ಚ್ ತಿಂಗಳಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ಪ್ರಕಟಿಸಬೇಕು. ಆ ಮೂಲಕ 9 ವಿಶ್ವವಿದ್ಯಾಲಯಗಳನ್ನು ಮತ್ತು ಅಲ್ಲಿ ಓದುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಸಂರಕ್ಷಿಸಬೇಕು ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರವು ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮುನ್ನ ಯಾವುದೇ ಪೂರ್ವ ತಯಾರಿ ನಡೆಸಿರಲಿಲ್ಲ. ಇದರಿಂದ ಸ್ವಂತ ಜಾಗ ಮತ್ತು ಖಾಯಂ ಬೋಧಕರು ಮತ್ತು ಮೂಲಭೂತ ಸೌಕರ್ಯಗಳಿಲ್ಲದೆ ತಾಂಡವಾಡುತ್ತಿದ್ದವು ಎಂಬ ಕಾರಣಕ್ಕೆ ತರಾತುರಿಯಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ ಕಾಲೇಜುಗಳನ್ನು ಸಂಯೋಜಿಸಲಾಗಿತ್ತು. ವಿದ್ಯಾರ್ಥಿಗಳನ್ನು ವರ್ಗಾಯಿಸಿ ಬಿಜೆಪಿ ಸರಕಾರ ಅಲ್ಲಿಗೆ ಹಣಕಾಸಿನ ನೆರವು ನೀಡಿರಲಿಲ್ಲ ಎಂದು ಆರೋಪಿಸಿದರು.

ವಿಶ್ವವಿದ್ಯಾಲಯಗಳಿಗೆ ಅಗತ್ಯವಿರುವ ಹಣಕಾಸು ನೆರವು ನೀಡಿ ಅವುಗಳನ್ನು ಬಲಪಡಿಸಬೇಕಾದ ರಾಜ್ಯದ ಕಾಂಗ್ರೆಸ್ ಸರ್ಕಾರವು ಆರ್ಥಿಕ ನೆಪವನ್ನು ಮುಂದಿಟ್ಟುಕೊಂಡು ವಿ.ವಿ.ಗಳನ್ನು ಮುಚ್ಚುವ ನಿರ್ಧಾರಮಾಡಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಒಟ್ಟಾರೆ ರಾಜ್ಯದ ಒಂಬತ್ತು ವಿವಿಗಳ ನೂರಾರು ಕಾಲೇಜುಗಳ ಸುಮಾರು ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ನೂರಾರು ಅಧ್ಯಾಪಕರು ಇತರೆ ಸಿಬ್ಬಂದಿಗಳು ಇದರಿಂದ ಆತಂತ್ರಗೊಳ್ಳುವ ಪರಿಸ್ಥಿತಿಗೆ ತಲುಪಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳು ತಮ್ಮ ಪ್ರತಿಷ್ಠೆಗಾಗಿ ಇಡೀ ಉನ್ನತ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿವೆ. ರಾಜಕೀಯ ಪಕ್ಷಗಳ ಸೈದ್ಧಾಂತಿಕ ವೈರತ್ವದ ಪೈಪೋಟಿಗೆ ಸಿಕ್ಕಿ ಒಟ್ಟು ಶಿಕ್ಷಣ ವ್ಯವಸ್ಥೆ ಅಧ್ವಾನವಾಗಿದೆ ಎಂದು ಕಟುವಾಗಿ ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News