Raichur | ವಸತಿ ಶಾಲೆಗಳಿಗೆ ಡಿಸಿ ಪೂವಿತಾ ಎಸ್. ಆಕಸ್ಮಿಕ ಭೇಟಿ; ಆಹಾರದ ಗುಣಮಟ್ಟ ಪರಿಶೀಲನೆ
ರಾಯಚೂರು : ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಬುಧವಾರ ರಾತ್ರಿ ನಗರದ ಹೊರವಲಯದಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಆಕಸ್ಮಿಕ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರ ಹಾಗೂ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು.
ವಸತಿ ನಿಲಯದಲ್ಲಿ ಮೆನುವಿನ ಪ್ರಕಾರವೇ ಆಹಾರ ವಿತರಿಸಲಾಗುತ್ತಿದೆಯೇ ಎಂಬುದನ್ನು ದಾಖಲಾತಿಗಳ ಮೂಲಕ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬಳಿಕ ಅಡುಗೆ ಕೋಣೆಗೆ ಭೇಟಿ ನೀಡಿ ಆಹಾರ ಸಾಮಗ್ರಿಗಳು ಹಾಗೂ ತಯಾರಾಗುತ್ತಿದ್ದ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.
ಅಡುಗೆ ಸಿಬ್ಬಂದಿಯಿಂದ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಯಾವ ರೀತಿಯ ಆಹಾರ ತಯಾರಿಸಲಾಗುತ್ತಿದೆ ಎಂಬ ಮಾಹಿತಿ ಪಡೆದು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮೆನುವಿನಂತೆ ಗುಣಮಟ್ಟದ ಆಹಾರವನ್ನು ನೀಡುವಂತೆ ಸೂಚಿಸಿದರು.
ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, “ಮೆನುವಿನ ಪ್ರಕಾರ ಆಹಾರ, ಮೊಟ್ಟೆ ಸೇರಿದಂತೆ ಎಲ್ಲ ಸೌಲಭ್ಯಗಳು ದೊರೆಯುತ್ತಿವೆಯೇ? ಯಾವುದೇ ಸಮಸ್ಯೆ ಇದ್ದರೆ ನಿರ್ಭಯವಾಗಿ ತಿಳಿಸಿ. ನಿಮ್ಮ ಸಮಸ್ಯೆಗಳನ್ನು ಆಲಿಸಲು ನಾನು ಇಲ್ಲಿಗೆ ಬಂದಿದ್ದೇನೆ” ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಜಿಲ್ಲೆಯ ಕೆಲ ವಸತಿ ನಿಲಯಗಳಲ್ಲಿ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ, ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಲ್ಲ ವಸತಿ ನಿಲಯಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಯಾವುದೇ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.