Raichur | ಪಿಂಜಾರ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ
ರಾಯಚೂರು: ಪಿಂಜಾರ ಸಮುದಾಯದ ಜನರ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಪಿಂಜಾರ್, ನದಾಫ್ ಮನ್ಸೂರಿ ಹಕ್ಕುಗಳ ಸಂಘದ ರಾಜ್ಯಾಧ್ಯಕ್ಷ ಇಮ್ರಾನ್ ಬಡೇಸಾಬ ಆಗ್ರಹಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಂಜಾರ, ನದಾಫ್ ಎಂದು ಕರೆಯಲಾಗುವ ಸಮುದಾಯವು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ಪ್ರವರ್ಗ-1ರಲ್ಲಿ ಸೇರಿಸಲಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಪಿಂಜಾರ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರ ಕೂಡಲೇ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಾಜಿಸಾಬ, ಮಹಿಬೂಬ್, ಜಾವಿದ್, ಮೆಹರುನ್ನಿಸಾ ಬೇಗಂ, ಖಾಸಿಂಬಿ, ಶಾಲಂ, ಅಸ್ಲಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.