Raichur | ಎ.ವಸಂತಕುಮಾರ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ
ಜಿಲ್ಲೆಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ
ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ, ರಾಯಚೂರು ಜಿಲ್ಲೆಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಜನಸೇವಾ ಟ್ರಸ್ಟ್ ಅಧ್ಯಕ್ಷ ಟಿ. ಚಂದ್ರಶೇಖರ ಆಗ್ರಹಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ. ವಸಂತಕುಮಾರ ಅವರು ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಾಡಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದು ಹೇಳಿದರು.
ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಮಹತ್ವದ ಪಾತ್ರ ವಹಿಸಿರುವ ಅವರು, ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಅವಧಿಯಲ್ಲಿ ₹22 ಕೋಟಿ ಅನುದಾನ ತಂದು ಜಿಲ್ಲೆಯ ಅಭಿವೃದ್ಧಿಗೆ ಬಳಸಿರುವುದು ಅವರ ಜನಪರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕರಾಗಿರುವ ಎ. ವಸಂತಕುಮಾರ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದ್ದು, ರಾಯಚೂರು ಜಿಲ್ಲೆಯ ಬಹುಕಾಲದ ರಾಜಕೀಯ ಪ್ರಾತಿನಿಧ್ಯದ ಬೇಡಿಕೆ ಈಡೇರುತ್ತದೆ. ಆದ್ದರಿಂದ ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜೆ. ರಾಮಪ್ಪ, ಎ. ರಾಮುಲು, ಜೆ.ಎಸ್. ರಾಜೇಶ, ಮುನಿಸ್ವಾಮಿ, ಎನ್. ಶಂಕರ, ಟಿ. ಜಗದೀಶ ಸೇರಿದಂತೆ ಜನಸೇವಾ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.