Raichur | ಭೀಮ್ ಆರ್ಮಿ ಜಿಲ್ಲಾ ಉಪಾಧ್ಯಕ್ಷರಾಗಿ ಡಾ.ಎಚ್.ಎಂ.ಬಾಬು ನೇಮಕ
ರಾಯಚೂರು: ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯ ರಾಯಚೂರು ಜಿಲ್ಲಾ ಉಪಾಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಡಾ.ಎಚ್.ಎಂ.ಬಾಬು ಅವರನ್ನು ನೇಮಕ ಮಾಡಲಾಗಿದೆ.
ಸಂಘಟನೆಯ ಜಿಲ್ಲಾಧ್ಯಕ್ಷ ವಿಶ್ವನಾಥ್ ಬಲಿದೇವ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬಾ ಖಾನ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾರ್ಯದರ್ಶಿ ಮೋಹನ್ ಬಲಿದೇವ್ ಅವರು ನೇಮಕಾತಿ ಆದೇಶವನ್ನು ಹಸ್ತಾಂತರಿಸಿದರು.
ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ. ಎಚ್.ಎಂ. ಬಾಬು ಅವರು ಬಡವರು, ನಿರ್ಗತಿಕರು ಹಾಗೂ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಭೂ ಒತ್ತುವರಿ ವಿರುದ್ಧ ಹೋರಾಟ ನಡೆಸಿ ಭೂವಂಚಿತರಿಗೆ ನ್ಯಾಯ ಒದಗಿಸುವುದು, ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ದೊರಕಿಸುವುದು, ಎಪಿಎಂಸಿ ಸಮಸ್ಯೆಗಳು ಹಾಗೂ ಸರ್ಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ಅಕ್ರಮಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿರುವುದನ್ನು ಪರಿಗಣಿಸಿ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.
ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆಗಾಗಿ ಸಂಘಟನೆಯ ಮೂಲಕ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಸಂಘಟನೆಯ ಪದಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.