ರಾಯಚೂರು: ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪದೋಷಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ಸರ್ಕಾರ ಐವರು ಸದಸ್ಯರ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಿದೆ.

ಲಿಂಗಸುಗೂರು ಸಹಾಯಕ ಆಯುಕ್ತರು ಸಲ್ಲಿಸಿರುವ ತನಿಖಾ ವರದಿಯ ಕುರಿತು ಹೆಚ್ಚಿನ ತನಿಖೆ ನಡೆಸುವುದು ಸೂಕ್ತವೆಂದು ಸರ್ಕಾರದ ಹಂತದಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿಗಳು ಸೇರಿದಂತೆ ಐವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ, ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಆಡಳಿತ ಮಂಡಳಿಯವರು ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಕ್ರಮವಾಗಿ ಮತ್ತು ಅನಧಿಕೃತವಾಗಿ ಅನುಮೋದನೆ ನೀಡಿ, ನೇಮಕಾತಿ ಆದೇಶ ಹೊರಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂಬ ಆರೋಪಗಳ ಪರಿಶೀಲನೆಗಾಗಿ ಸರ್ಕಾರ ತನಿಖಾ ಸಮಿತಿ ರಚಿಸಿದೆ.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅನುಮೋದನೆ ನೀಡಿರುವ ಕುರಿತು ಹಲವು ದೂರುಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಸಮಗ್ರ ಪರಿಶೀಲನೆ ನಡೆಸಿ 30 ದಿನಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಾವಸಲಿ ರಾಯಚೂರು/ವಾರ್ತಾಭಾರತಿ

ರಾಯಚೂರು ಜಿಲ್ಲಾ ವರದಿಗಾರರು

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ