ರಾಯಚೂರು |ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಪೂವಿತಾ ಎಸ್
ರಾಯಚೂರು: ಜಿಲ್ಲೆಯಲ್ಲಿ ಪ್ರಸ್ತುತ ಮಳೆ ಕಡಿಮೆಯಾಗಿರುವುದರಿಂದ ಮುಂದಿನ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಜಿಲ್ಲೆಯ ಯಾವ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗಬಹುದು ಎಂಬುದರ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೂನ್ 20ರ ಶನಿವಾರದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸಗೊಬ್ಬರ, ಮಳೆಹಾನಿ ಮುಂತಾದ ವಿಷಯಗಳ ಕುರಿತು ಚರ್ಚಿಸಲು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಆಯಾ ತಾಲೂಕಿನ ರಸಗೊಬ್ಬರ ಅಂಗಡಿಗಳಿಗೆ ಕೃಷಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಬೀಜ ಹಾಗೂ ರಸಗೊಬ್ಬರದ ಬಗ್ಗೆ ಮಾಹಿತಿ ಪಡೆಯಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ರೈತರಿಗೆ ಇನ್ಸೂರೆನ್ಸ್ ಮಾಡಿಸುವ ಕುರಿತು ಅವರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಸಗಿ ಬೋರವೆಲ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಟಾಸ್ಕಪೋರ್ಸ್ ಅನುದಾನ ರಿಲೀಸ್ ಆಗಿರುವುದರಿಂದ ಯಾವುದೇ ಕುಡಿಯುವ ನೀರಿನ ಬಿಲ್ ಬಾಕಿ ಇರಬಾರದು. ಆಯಾ ತಾಲೂಕು ವ್ಯಾಪ್ತಿಯಲ್ಲಿ ಟಾಸ್ಕಪೋರ್ಸ್ ಸಭೆಗಳನ್ನು ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ರಾಯಚೂರು ವಿಭಾಗದ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಲಿಂಗಸಗೂರು ವಿಭಾಗದ ಸಹಾಯಕ ಆಯುಕ್ತ ಬಸವೇಣ್ಣಪ್ಪ ಕಲಶೆಟ್ಟಿ, ಅರಣ್ಯ ಇಲಾಖೆ ಜಿಲ್ಲಾಧಿಕಾರಿ ಪ್ರವೀಣ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌವಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.