Raichur | ಭೀಕರ ರಸ್ತೆ ಅಪಘಾತ : ವೈದ್ಯಕೀಯ ವಿದ್ಯಾರ್ಥಿನಿ ಮೃತ್ಯು
ಸಾಂದರ್ಭಿಕ ಚಿತ್ರ
ರಾಯಚೂರು: ವೈದ್ಯಕೀಯ ವಿದ್ಯಾರ್ಥಿನಿ ಡಾ.ಶ್ರೀವೇಣಿ ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಡಾ.ಶ್ರೀವೇಣಿ ಅವರು, ಅ. 2ರ ಗಾಂಧಿ ಜಯಂತಿ ರಜೆಯ ಹಿನ್ನೆಲೆಯಲ್ಲಿ ತಮ್ಮ ಸಹಪಾಠಿ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರ ಪೈಕಿ ಡಾ.ಶ್ರೀವೇಣಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ರಾಯಚೂರಿಗೆ ತರಲಾಗುತ್ತಿದ್ದು, ಅ. 4ರಂದು ರಾಯಚೂರು ತಾಲೂಕಿನ ಮರ್ಚೆಡ್ ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ಕುಟುಂಬದ ವಿಧಿ-ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಡಾ.ಶ್ರೀವೇಣಿ ಅವರ ನಿಧನಕ್ಕೆ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ ಹಾಗೂ ಛಲವಾದಿ ಸಮಾಜದ ಪ್ರಮುಖ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.