Raichur | ಲಿಂಗತ್ವ ಅಲ್ಪಸಂಖ್ಯಾತರಿಗೆ ಶೇ.1 ಮೀಸಲಾತಿ ಜಾರಿಗೊಳಿಸಿ : ಅಕ್ಕೆ ಪದ್ಮಶಾಲಿ
ರಾಯಚೂರು: ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.1ರಷ್ಟು ಮೀಸಲಾತಿ ಜಾರಿಗೊಳಿಸಬೇಕು. ಜೊತೆಗೆ ಪ್ರತ್ಯೇಕ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಲಿಂಗತ್ವ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕೆ ಪದ್ಮಶಾಲಿ ಆಗ್ರಹಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗತ್ವ ಅಲ್ಪಸಂಖ್ಯಾತರು ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿ ಸಂವಿಧಾನಬದ್ಧ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಕುಟುಂಬ ಹಾಗೂ ಸಮಾಜದಿಂದ ದೂರವಾಗಿ ಅನೇಕರು ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದು, ಭಿಕ್ಷಾಟನೆ ನಿಷೇಧದಿಂದ ಅವರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನಿರ್ದೇಶನಗಳಂತೆ ಮೀಸಲಾತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರ್ಕಾರ ಮೇಲುಸ್ತುವಾರಿ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.
2023ರಲ್ಲಿ ಜಾರಿಯಾದ ಮಹಿಳಾ ಮೀಸಲು ಕಾಯ್ದೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರನ್ನು ಸೇರಿಸದಿರುವುದು ವಿಷಾದನೀಯ. ರಾಜಕೀಯ ಕ್ಷೇತ್ರದಲ್ಲಿಯೂ ಅವರಿಗೆ ಸೂಕ್ತ ಅವಕಾಶ ಕಲ್ಪಿಸುವಂತೆ ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದರು.
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ 2002ರ ದಾಖಲೆಗಳನ್ನು ಕಡ್ಡಾಯಗೊಳಿಸಿರುವುದರಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ತೊಂದರೆಯಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗವು ಅವರನ್ನು ಪ್ರತ್ಯೇಕ ವರ್ಗವಾಗಿ ಗುರುತಿಸಿ, ದಾಖಲೆಗಳಿಲ್ಲದಿದ್ದರೂ ಮತದಾರರ ಪಟ್ಟಿಗೆ ಸೇರಿಸಲು ವಿಶೇಷ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಅದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ ಅವರು, ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುವ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸದೆ ಸೂಕ್ತ ರಕ್ಷಣೆ ನೀಡಬೇಕು. ಸಮಾಜವೂ ಅವರಿಗೆ ಸಮಾನ ಅವಕಾಶ ಕಲ್ಪಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ವಂದನಾ, ಕಾಜಲ್, ಅಬೀದಾ ಬೇಗಂ, ಲಕ್ಷ್ಮಣ ಕನಕೋಟ್ಲ ಉಪಸ್ಥಿತರಿದ್ದರು.