ರಾಯಚೂರು | ಹಿರಿಯರ ಯೋಗಕ್ಷೇಮ ಕಾಪಾಡುವುದು ಪ್ರತಿಯೊಬ್ಬರ ಹೊಣೆ: ಶಾಸಕ ಡಾ.ಎಸ್.ಶಿವರಾಜ ಪಾಟೀಲ್
ರಾಯಚೂರು : ಮಕ್ಕಳ ಲಾಲನೆ–ಪಾಲನೆ ಜೊತೆಗೆ ಅವರ ಬದುಕು ರೂಪಿಸುವಲ್ಲಿ ತಂದೆ-ತಾಯಿಯ ಪಾತ್ರ ಬಹುಮುಖ್ಯವಾಗಿದ್ದು, ಹಿರಿಯ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಹೇಳಿದರು.
ಅವರು ಅ.8ರಂದು ಕನ್ನಡ ಭವನದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಲವು ಸ್ವಯಂಸೇವಾ ಸಂಸ್ಥೆಗಳು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದವು.
ತಂದೆ-ತಾಯಿಯ ಶ್ರಮದಿಂದಲೇ ಮಕ್ಕಳ ಜೀವನ ಸಾರ್ಥಕವಾಗುತ್ತದೆ. ನಮ್ಮ ಜೀವನದ ನಿಜವಾದ ದೇವರು ಎಂದರೆ ತಂದೆ-ತಾಯಿ ಮತ್ತು ಹಿರಿಯರು. ನಗರದಲ್ಲಿ ಹಿರಿಯ ನಾಗರಿಕರಿಗೆ ನಡೆಯಲು ಪಾರ್ಕ್‌ಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕರು ಹೇಳಿದರು.
ಸಹಾಯಕ ಆಯುಕ್ತ ಗಜಾನನ ಬಾಳೆ ಅವರು ಹಿರಿಯ ನಾಗರಿಕರ ಕಾಯಿದೆ 2007ರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಹಿರಿಯ ನಾಗರಿಕರಿಗೆ ಯಾವುದೇ ತೊಂದರೆ ಉಂಟಾದರೆ, ಕಾಯಿದೆಯಡಿಯಲ್ಲಿ ದೂರು ದಾಖಲಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಹಿರಿಯರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅವರ ಆರೋಗ್ಯ ರಕ್ಷಣೆ ನಮ್ಮ ಕರ್ತವ್ಯ ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್ ಅವರು ಮಾತನಾಡಿ, ಹಿರಿಯರ ಕ್ಷೇಮವನ್ನು ಪ್ರತಿಯೊಬ್ಬರೂ ತಮ್ಮ ಆದ್ಯ ಕರ್ತವ್ಯವೆಂದು ಪರಿಗಣಿಸಬೇಕು ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸೇವಾ ಸಿಂಧೂ ಮೂಲಕ 4,000ಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ನಾಲ್ಕು ವೃದ್ಧಾಶ್ರಮಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಸಮಾಜ ಸೇವೆ, ಧಾರ್ಮಿಕ ಹಾಗೂ ಕಲೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಏಳು ಮಂದಿ ಹಿರಿಯ ನಾಗರಿಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶರಣಮ್ಮ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮಹದೇವಪ್ಪ, ನಿವೃತ್ತ ಸಿಪಿಐ ರಾಮಣ್ಣ, ಕನ್ನಡ ಸಾಹಿತ್ಯ ಪರಿಷತ್ ಸಹ ಕಾರ್ಯದರ್ಶಿ ಡಾ. ದಂಡಪ್ಪ ಬಿರಾದರ ಹಾಗೂ ಜಿಲ್ಲೆಯ ವಿವಿಧ ತಾಲೂಕಿನ ಹಿರಿಯ ನಾಗರಿಕರು ಉಪಸ್ಥಿತರಿದ್ದರು.