Raichur | ಜ್ಞಾನೇಶ್ ಕುಮಾರ್ ರಾಜೀನಾಮೆ, ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಜೈಲ್ ಭರೋ ಚಳವಳಿ
ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದ ಬಳಿ ಜೈಲ್ ಭರೋ ಚಳವಳಿ ನಡೆಸಲಾಯಿತು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ನಾಗರಿಕರ ಮತದಾನದ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟಗಾರರು ತಿಳಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಅಝೀಝ್ ಜಾಗೀರದಾರ್, ಮತದಾರರ ಪಟ್ಟಿಗಳ ಪರಿಷ್ಕರಣೆಯ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಳಿಸುವ ಆತಂಕ, ಹೆಸರುಗಳನ್ನು ಮರುಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿನ ತೊಂದರೆಗಳು ಹಾಗೂ ಆಕ್ಷೇಪಣೆ ಸಲ್ಲಿಸುವ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.
ಮತದಾನವು ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿದ್ದು, ಯಾವುದೇ ಅರ್ಹ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ವಿಶೇಷವಾಗಿ ದಲಿತರು, ಧಾರ್ಮಿಕ ಅಲ್ಪಸಂಖ್ಯಾತರು, ವಲಸೆ ಕಾರ್ಮಿಕರು, ಮಹಿಳೆಯರು ಹಾಗೂ ಇತರ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕುಗಳಿಗೆ ಧಕ್ಕೆಯಾಗದಂತೆ ಚುನಾವಣಾ ಆಯೋಗ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಜನವರಿ 2025ರಲ್ಲಿ ಇದ್ದ ಮತದಾರರ ಪಟ್ಟಿಗಳನ್ನು ಮರುಸ್ಥಾಪಿಸಬೇಕು. ಮತದಾರರ ಪಟ್ಟಿಯಿಂದ ಅಳಿಸಲಾದ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸುವ ಮೂಲಕ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ಖಚಿತಪಡಿಸಬೇಕು. ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಪಾರದರ್ಶಕತೆ, ಕಾನೂನುಬದ್ಧತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಚುನಾವಣಾ ಆಯೋಗವು ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಬೇಕು. ಮತದಾರರ ಪಟ್ಟಿಯಿಂದ ಅರ್ಹ ನಾಗರಿಕರನ್ನು ಹೊರಗಿಡುವ ಯಾವುದೇ ಕ್ರಮವನ್ನು ಸಹಿಸಲಾಗದು. ಪ್ರಜಾಪ್ರಭುತ್ವ ಹಾಗೂ ಮತದಾನದ ಹಕ್ಕಿನ ರಕ್ಷಣೆಗಾಗಿ ಜನರು ಕೂಡ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್, ತಾಲೂಕು ಕಾರ್ಯದರ್ಶಿ ಅಜೀಜ್ ಜಾಗೀರ್ದಾರ್, ಮುಖಂಡರಾದ ಜಿಲಾನಿ ಯರಗೇರಾ, ಆರ್.ಎಚ್. ಕಲ್ಮಗಿ, ಬಸವರಾಜ್ ಬೆಳಮುಗಿ, ಭೀಮಯ್ಯ, ಜಗದೀಶ್, ಹನೀಫ್ ಅಬಕಾರಿ, ಖಾದರ್, ವೀರೇಶ್, ಜೋಳಯ್ಯ, ನರಸಪ್ಪ, ಈರಣ್ಣ, ಯಲ್ಲಪ್ಪ, ಮಹೇಂದ್ರ, ಹನುಮಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.