Raichur | ಆ.10ರಂದು ಜೈಲ್ ಭರೋ ಚಳುವಳಿ : ಕೆ.ಜಿ.ವೀರೇಶ

Update: 2026-08-06 19:15 IST

ರಾಯಚೂರು: ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನಲ್ಲಿ ‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಆಗಸ್ಟ್‌ 10ರಂದು ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಹಾಗೂ ಜೈಲ್ ಭರೋ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕದ ಜಿಲ್ಲಾ ಸಂಚಾಲಕ ಕೆ.ಜಿ. ವೀರೇಶ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ, ಕಾರ್ಪೊರೇಟ್ ಭೂ ಕಬಳಿಕೆ, ಪರಿಷ್ಕೃತ ಕನಿಷ್ಠ ವೇತನದ ಸಮರ್ಪಕ ಅನುಷ್ಠಾನ, ವಿದ್ಯುತ್ ತಿದ್ದುಪಡಿ ಕಾಯ್ದೆ–2025, ಬೀಜ ಕಾಯ್ದೆ–2025, ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ಹಾಗೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕೃಷಿ ಉತ್ಪನ್ನಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಜಾರಿಗೊಳಿಸಬೇಕು. ರೈತರು, ಕೃಷಿ ಕೂಲಿಕಾರರು ಹಾಗೂ ಮಹಿಳೆಯರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ರಸಗೊಬ್ಬರ, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಬ್ಯಾಂಕ್, ವಿಮೆ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಖಾಸಗೀಕರಣವನ್ನು ತಡೆಯಬೇಕು. ರಾಜ್ಯದಲ್ಲಿ ತಕ್ಷಣ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಆಗಸ್ಟ್‌ 10ರಂದು ಬೆಳಿಗ್ಗೆ 10 ಗಂಟೆಗೆ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ರೈತರು, ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೇರಲಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಪ್ರತಿಭಟನೆ ಹಾಗೂ ಜೈಲ್ ಭರೋ ಚಳುವಳಿ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯ ರೈತರು, ಕೃಷಿ ಕೂಲಿಕಾರರು, ಮಹಿಳೆಯರು, ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು, ದಲಿತರು ಸೇರಿದಂತೆ ಎಲ್ಲ ವರ್ಗದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಜೆಸಿಟಿಯು ಸಂಚಾಲಕ ಶರಣಬಸವ ಡಿ. ಎಸ್., ಮಹೇಶ, ರಂಗನಾಥ, ಮಲ್ಲನಗೌಡ, ಮುದುಕಪ್ಪ ನಾಯಕ, ಆಜಿನೇಯ ಕುರುಬ ದೊಡ್ಡಿ, ಶ್ರೀನಿವಾಸ ಕಲವಲದೂಡ್ಡಿ, ಮಲ್ಲಣ್ಣ, ಖಾಜಾ ಅಸ್ಲಂ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News